ತುಮಕೂರು :
ಶಾಲೆ ಬಿಟ್ಟು ಜಿಲ್ಲೆಯಿಂದ ವಲಸೆ ಹೋಗುವ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಪ್ರಥಮಾದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಮ್ಮ ಕಛೇರಿಯಲ್ಲಿಂದು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಪರಸ್ಪರ ಸಹಕಾರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ ಪೋಷಕರು ತಮ್ಮ ಮಕ್ಕಳೊಂದಿಗೆ ವಲಸೆ ಹೋಗದಂತೆ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಿಂದ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶಗಳಿಗೆ ವಲಸೆ ಹೋಗಿರುವ ಮಕ್ಕಳನ್ನು ಶಾಲೆಗೆ ದಾಖಲಿಸಲು ಆಯಾ ರಾಜ್ಯದ ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಿ ಸಮನ್ವಯತೆ ಸಾಧಿಸಲಾಗಿದೆ ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಗೆ ವಲಸೆ ಹೋಗಿರುವ ಮಕ್ಕಳನ್ನು ಶಾಲೆಗೆ ದಾಖಲಿಸಲು ಆಯಾ ಜಿಲ್ಲಾ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕೆಲವು ಮುಸ್ಲಿಂ ಪೋಷಕರು ತಮ್ಮ ಮಕ್ಕಳನ್ನು ಮದರಸಾಗಳಿಗೆ ದಾಖಲಿಸಿದ್ದು, ಶಾಲೆಗೆ ದಾಖಲಿಸಲು ಒಪ್ಪುತ್ತಿಲ್ಲ. ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಮಾತ್ರ ಕಲಿಸಲಾಗುತ್ತಿರುವುದರಿಂದ ಈ ಮಕ್ಕಳನ್ನು ಸಹ ಶಾಲೆಯಿಂದ ಹೊರಗಳಿದ ಮಕ್ಕಳೆಂದು ಪರಿಗಣಿಸಲಾಗುತ್ತದೆ. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 540 ಮಕ್ಕಳನ್ನು ಪತ್ತೆ ಹಚ್ಚಲಾಗಿದ್ದು, ಬಡತನ, ಅನಕ್ಷರತೆ, ಅರಿವಿನ ಕೊರತೆ, ವಲಸೆ ಹೋಗುವಿಕೆಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಪ್ರಮಾಣ ಹೆಚ್ಚಾಗಿ ತೋರುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮಾತನಾಡಿ, ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಮನೆ-ಮನೆಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಕಳುಹಿಸದ ಪೋಷಕರಿಗೆ ಅರಿವು ಮೂಡಿಸಬೇಕು. ಒಪ್ಪದಿದ್ದಲ್ಲಿ ಅಂಥ ಪೋಷಕರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ನಿರ್ದೇಶನ ನೀಡಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಪ್ರಮಾಣವನ್ನು ಶೂನ್ಯಕ್ಕಿಳಿಸುವಲ್ಲಿ ಅಧಿಕಾರಿಗಳು ಶ್ರಮಿಸಬೇಕು. ಮುಖ್ಯವಾಹಿನಿಗೆ ಬಾರದ ಮಕ್ಕಳ ಸಂಪೂರ್ಣ ವಿವರವನ್ನು ಕೂಡಲೇ ತಮಗೆ ಸಲ್ಲಿಸಬೇಕೆಂದು ತಿಳಿಸಿದರು.