ತುಮಕೂರು :
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ 2021ರ ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೊಸ ನ್ಯಾಯಾಲಯದ ಕಟ್ಟಡದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅದರಂತೆ ಮಾರ್ಚ್ 27ರಂದು ಹಮ್ಮಿಕೊಂಡಿರುವ ಬೃಹತ್ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಬೃಹತ್ ಲೋಕ್ ಅದಾಲತ್‍ನಲ್ಲಿ ಅತೀ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠೆಕ್ ಗಳು ನಡೆಯುತ್ತಲಿವೆ. ಕೋವಿಡ್ 19 ಸಾಂಕ್ರಾಮಿಕದ ಕಾರಣ ರಾಜೀ ಮಾತುಕತೆಯನ್ನು ಎಲೆಕ್ಟ್ರಾನಿಕ್ ವಿಧಾನಗಳ (ವಿಡಿಯೋ ಕಾನ್ಪರೆನ್ಸಿಂಗ್, ವಾಟ್ಸ್ಆ್ಯಪ್ ವಿಡಿಯೋ ಕಾಲ್) ಮೂಲಕವೂ ಮಾಡಲಾಗುತ್ತಿದೆ ಎಂದರು.
ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ಸೇರಿದಂತೆ ರಾಜಿಯಾಗಬಲ್ಲ ಇತರೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು(ವಿಚ್ಛೇದನ ಪ್ರಕರಣ ಹೊರತುಪಡಿಸಿ), ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು(ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳ(ಬಾಡಿಗೆ, ಅನುಭೋಗದ ಹಕ್ಕುಗಳು ನಿಬರ್ಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು)ನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಮಾರ್ಚ್ 27ರಂದು ನಡೆಯುವ ಬೃಹತ್ ಲೋಕ್ ಅದಾಲತ್‍ನ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮನವಿ ಮಾಡಿದ ಅವರು, ಹೈಕೋರ್ಟ್ ನೀಡುವ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಎಂದರು.
ಜಿಲ್ಲೆಯ ನ್ಯಾಯಾಲಯಗಳಲ್ಲಿ ಜನವರಿ ಅಂತ್ಯಕ್ಕೆ 46194 ಸಿವಿಲ್ ಹಾಗೂ 33314 ಕ್ರಿಮಿನಲ್ ಪ್ರಕರಣಗಳು ಸೇರಿ ಒಟ್ಟು 79508 ಪ್ರಕರಣಗಳು ಬಾಕಿ ಇವೆ. ಬಾಕಿ ಪ್ರಕರಣಗಳಲ್ಲಿ ಚೆಕ್, ಮೋಟಾರ್ ಅಪಘಾತ, ಎಂಎಂಡಿಆರ್, ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ದಾವೆಗಳು ಹೆಚ್ಚು ಇವೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆಯೊಂದಿಗೆ ಮಾತನಾಡಿ ಪೈಲೆಟ್ ಪ್ರಾಜೆಕ್ಟ್ ಮೂಲಕ ಗ್ರಾಮೀಣ ಭಾಗದಲ್ಲಿ 12368 ಜನನ ಪ್ರಮಾಣ ಪತ್ರಗಳ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆರ್. ದೇವರಾಜು ಇದ್ದರು.