ತುಮಕೂರು :
ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಕಾಡಶೆಟ್ಟಿಹಳ್ಳಿಯಲ್ಲಿ ಶನಿವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಗ್ರಾಮ ವಾಸ್ತವ್ಯ ಮಾಡಿದರು.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಗಿಡ ನೆಟ್ಟು, ನಂತರ ಗ್ರಾಮದಲ್ಲಿನ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಇಲಾಖೆಗಳಿಂದ ಆಯೋಜಿಸಲಾಗಿದ್ದ ಪ್ರಾತ್ಯಕ್ಷತೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ನಂತರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಆಗಮಿಸಿ ಗ್ರಾಮದ ಜನರ ಸಮಸ್ಯೆ ಆಲಿಸಿದರು.
ಅನಂತರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾಮಾನ್ಯ ಜನರ ಸಮಸ್ಯೆ ಆಲಿಸಿ, ಸಮಸ್ಯೆ ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ನ್ಯಾಯಾಲಯಕ್ಕೆ ಮತ್ತು ವೈಯಕ್ತಿಕ ಸಮಸ್ಯೆ ಹೊರತುಪಡಿಸಿ, ಸ್ಥಳದಲ್ಲೇ ಇತ್ಯರ್ಥಪಡಿಸುವ ಸಮಸ್ಯೆಗಳನ್ನು ಬಗೆಹರಿಸಿ ಉಳಿದ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಅರ್ಹರಿಗೆ ಸೌಲಭ್ಯ ಸಿಗಬೇಕು. ಅನರ್ಹರು ಸೌಲಭ್ಯ ಪಡೆದಿದ್ದ ಮಾಹಿತಿ ಕೊಟ್ಟರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಇಂದು ಒಟ್ಟು 52 ಅರ್ಜಿಗಳು ಬಂದಿವೆ. ಅದರಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಆಗಿದ್ದು, ಬಗೆಹರಿಸುವ ಅರ್ಜಿಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗಿದೆ. ಉಳಿದವುಗಳಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, 7 ಸಾಮಾಜಿಕ ಭದ್ರತಾ ಯೋಜನೆಯಡಿಯ ಸೌಲಭ್ಯ, 2 ಸಾಗುವಳಿ ಚೀಟಿ, ಕಣ್ಣಿನ ತಪಾಸಣೆ ನಡೆಸಿ 25 ಕನ್ನಡಕಗಳನ್ನು ನೀಡಲಾಗಿದೆ. 16 ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಲಾಗಿದೆ. 9 ಪಹಣಿ ತಿದ್ದುಪಡಿ, 84 ಪೆÇೀಡಿ ಸಮಸ್ಯೆ , 7 ಪೌತಿ ಖಾತೆ ಸರಿಪಡಿಸಲಾಗಿದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಘನತ್ಯಾಜ್ಯ ನಿರ್ವಹಣೆಗಾಗಿ ಜಾಗ ನೀಡಲಾಗಿದೆ. ಗ್ರಾಮಕ್ಕೆ ಸ್ಮಶಾನ ಜಾಗ ಮೀಸಲಿಡಲಾಗಿದೆ ಎಂದು ಹೇಳಿದರು.
ಸರಕಾರಿ ಜಾಗ ಒತ್ತುವರಿ ಮಾಡಿಕೊಂಡು ಓಡಾಡುವ ದಾರಿಗೆ ಸಮಸ್ಯೆಯಾಗಿದೆ. ಕೆರೆಗೆ ನೀರು ಬರುವ ಮಾರ್ಗ ಮಧ್ಯೆ ಜಮೀನು ಅಭಿವೃದ್ಧಿ ಪಡಿಸಿ ನೀರು ಹೋಗದಂತೆ ತಡೆಹಿಡಿಯಲಾಗಿದೆ ಎಂಬುದು ಸೇರಿದಂತೆ
ಬೆಸ್ಕಾಂಗೆ ಸಂಬಂಧಿಸಿದ ದೂರುಗಳು ಬಂದಿವೆ. ಈ ದೂರುಗಳನ್ನು ಪರಶೀಲಿಸಿ ತುರ್ತಾಗಿ ಇತ್ಯರ್ಥಪಡಿಸುವ ಕ್ರಮಕೈಗೊಳ್ಳಲಾಗುವುದು ಎಂದರು.
ತಾಲೂಕಿನ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆಯೂ ದೂರು ಬಂದಿದ್ದು, ಈ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಮತ್ತು ಗ್ರಾಮದ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರಗೊಳ್ಳುವ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗಿದೆ. ಉಳಿದ ಸಮಸ್ಯೆಗಳನ್ನು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ವಿವಿಧ ಇಲಾಖೆಗಳು ತಮ್ಮದೇ ಯೋಜನೆಗಳ ಸೌಲಭ್ಯ ಕುರಿತು ಮಳಿಗೆ ಪ್ರದರ್ಶನದ ಮೂಲಕ ಅರಿವು ಮೂಡಿಸಿದ್ದಾರೆ. ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಸ್ಥಳದಲ್ಲಿಯೇ ದೃಷ್ಠಿದೋಷವುಳ್ಳವರಿಗೆ ಕನ್ನಡಕ ವಿತರಿಸಲಾಗಿದೆ ಎಂದರು.
ಎಸ್‍ಪಿ ಡಾ.ಕೆ. ವಂಶಿಕೃಷ್ಣ ಮಾತನಾಡಿ, ಪೆÇಲೀಸ್ ಇಲಾಖೆಯೂ ಜನಸ್ನೇಹಿಯುತವಾಗಿ ಕೆಲಸ ಮಾಡುತ್ತಿದೆ. ಜನರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಸಲುವಾಗಿ 112 ಸೇವೆ ಪ್ರಾರಂಭಿಸಲಾಗಿದೆ. ಸಮಸ್ಯೆ ಇದ್ದವರು 112ಗೆ ಕರೆ ಮಾಡಿ ಮಾಹಿತಿ ನೀಡಿದರೆ 15 ನಿಮಿಷದಲ್ಲಿ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.
ಈ ವೇಳೆ ಉಪವಿಭಾಗಧಿಕಾರಿ ಅಜಯ್, ತೋಟಗಾರಿಕ ಇಲಾಖೆ ಉಪನಿರ್ದೇಶಕ ರಘು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರಮೇಶ್, ತಹಸೀಲ್ದಾರ್ ಪ್ರದೀಪ್ ಕುಮಾರ್ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಾಡಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಸದಸ್ಯ ಸತೀಶ್, ಕಡಬ ಗ್ರಾಮಪಂಚಾಯಿತಿ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.