ತುಮಕೂರು:
ಮುಂದಿನ ಒಂದು ವಾರದಲ್ಲಿ ನಿರೀಕ್ಷೆಯಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್‍ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಇನ್ನೂ ಕೆಲವು ಪ್ರದೇಶಗಳಲ್ಲಿ ಜಿಲ್ಲಾಡಳಿತದ ನಿರೀಕ್ಷೆಯಂತೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಈಗಲೂ ಇರುವ ಕೆಂಪು ವಲಯ ಮತ್ತು ಹಾಟ್‍ಸ್ಪಾಟ್ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ತೆರವಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.
ಕೊರೋನಾ ಸೋಂಕಿತರ ಸಂಖ್ಯೆಯ ಹೆಚ್ಚಳದಿಂದಾಗಿ ಶಿರಾ ತಾಲೂಕು ಸೇರಿದಂತೆ ಉಳಿದ ತಾಲೂಕುಗಳ ಭಾಗಗಳು ಕೆಂಪುವಲಯ ಹಾಗೂ ಹಾಟ್‍ಸ್ಪಾಟ್ ಪ್ರದೇಶಗಳನ್ನಾಗಿ ಗುರತಿಸಲಾಗಿದೆ. ಈ ಪ್ರದೇಶಗಳಲ್ಲಿ ಸೋಂಕನ್ನು ನಿಯಂತ್ರಣಕ್ಕೆ ತಂದು ಆ ಪ್ರದೇಶಗಳನ್ನು ಕೆಂಪುವಲಯ ಹಾಗೂ ಹಾಟ್‍ಸ್ಪಾಟ್‍ಗಳಿಂದ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸೋಂಕಿತರ ಸಂಪರ್ಕಿತರ ಬಗ್ಗೆ ನಿಗಾವಹಿಸಬೇಕು. ರೋಗಲಕ್ಷಣಗಳುಳ್ಳ ಸೋಂಕಿತರ ಸಂಪರ್ಕಿತರು ಹಾಗೂ ಸೋಂಕಿತರ ಕುಟುಂಬಸ್ಥರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಬೇಕು. ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರನ್ನು ಬಳಸಿಕೊಂಡು ಕೋವಿಡ್ ಸೋಂಕಿತರ ಆರೋಗ್ಯದ ಬಗ್ಗೆ ಸದಾ ಗಮನಹರಿಸುವಂತೆ ನಿರ್ದೇಶಿಸಿದರು.
ಆರ್‍ಸಿಎಚ್ ಅಧಿಕಾರಿ ಡಾ. ಕೇಶವರಾಜ್ ಮಾತನಾಡಿ, ಜಿಲ್ಲೆಗೆ ಪೂರೈಕೆಯಾಗುತ್ತಿರುವ ಲಸಿಕೆಯನ್ನು ತಾಲೂಕುವಾರು ಜನಸಂಖ್ಯೆಗನುಗುಣವಾಗಿ ಲಸಿಕಾಕರಣ ಕಾರ್ಯ ಮಾಡಲಾಗುತ್ತಿದೆ. ಯಾವುದೇ ಸಮಸ್ಯೆಯಾಗದಂತೆ ಲಸಿಕಾ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಲಸಿಕೆ ಪೂರೈಕೆಯಾಗುವ ಸಾಧ್ಯತೆಯಿದೆ. ಹೆಚ್ಚು ಲಸಿಕೆ ಬಂದ ತಕ್ಷಣ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ವರ್ಗದವರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಿಗೆ ಮಾಹಿತಿ ಒದಗಿಸಿದರು.