ತುಮಕೂರು:
ಪ್ರತಿಯೊಬ್ಬರೂ ಸಾಮಾಜಿಕ ಸಮಾನತೆಗಾಗಿ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಅನುಸರಿಸಬೇಕು ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ ಕರೆ ನೀಡಿದರು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗವು ವಿವಿ ಆವರಣದಲ್ಲಿಂದು ಏರ್ಪಡಿಸಿದ್ದ “ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ” ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಾಜದಲ್ಲಿಂದು ನಾವೆಲ್ಲ ಸ್ವಾರ್ಥ ಮನೋಭಾವನೆಯಲ್ಲಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯು ತಮ್ಮ ಹೊಣೆಗಾರಿಕೆಯನ್ನು ಅರಿತಾಗ ಮಾತ್ರ ಸಾಮಾಜಿಕ ನೆಮ್ಮದಿ ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ 6ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಾಬಾ ಸಾಹೇಬ್ ಎಲ್. ಜಿನರಾಳ್ಕರ್ ಅವರು ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಸಮಾನರು. ಸರ್ಕಾರವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ನೀಡಿ ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಬೇಕು. ಬಡವ-ಶ್ರೀಮಂತರ ನಡುವೆ ಅಂತರ ಕಡಿಮೆಯಾದರೆ ಮಾತ್ರ ಸಾಮಾಜಿಕ ಸಮಾನತೆ ಕಾಣಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಲಾ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರಪ್ಪ, ಸಮಾಜಶಾಸ್ತ್ರ ವಿಭಾಗದ ಸಂಯೋಜಕಿ ಸುನೀತ ಗಾಣಿಗರ್, ಸಹಾಯಕ ಪ್ರಾಧ್ಯಾಪಕ ಡಾ|| ನಾಗರಾಜ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.