ತುಮಕೂರು:
ಜಿಲ್ಲೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ತಿಪಟೂರಿನ ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಸಂಘವನ್ನು ರಾಜ್ಯ ಪ್ರಶಸ್ತಿಗಾಗಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಿ ರಾಜ್ಯಕ್ಕೆ ಶಿಫಾರಸ್ಸು ಮಾಡಿ ಕಳುಹಿಸಿಕೊಡಲು ನಿರ್ಧರಿಸಲಾಯಿತು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ತುಮಕೂರು ಜಿಲ್ಲೆಯಲ್ಲಿ ಒಟ್ಟು 11036 ಸ್ತ್ರೀಶಕ್ತಿ ಗುಂಪುಗಳಿದ್ದು, 177032 ಮಹಿಳೆಯರು ಸದಸ್ಯರಿದ್ದಾರೆ. 2019-20ನೇ ಸಾಲಿನಲ್ಲಿ ರೂ. 10ಲಕ್ಷ ಸುತ್ತುನಿಧಿ ಮತ್ತು ತರಬೇತಿಗಾಗಿ ರೂ. 218400 ಬಿಡುಗಡೆ ಮಾಡಲಾಗಿದೆ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕಾಗಿ ರೂ. 75000 ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೂ ರೂ. 50000 ವೆಚ್ಚವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್. ನಟರಾಜ್ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 10 ಸಾಂತ್ವಾನ ಕೇಂದ್ರಗಳು ಮಹಿಳೆಯರ ಮತ್ತು ಮಕ್ಕಳ ಯೋಗಕ್ಷೇಮ, ವರದಕ್ಷಿಣೆ ಮತ್ತು ಕೌಟುಂಬಿಕ ಕಲಹಗಳ ನಿವಾರಣೆಗಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು 1315 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 937 ಪ್ರಕರಣಗಳನ್ನು ಇದುವರೆಗೂ ಆಪ್ತ ಸಮಾಲೋಚನೆಯ ಮೂಲಕ ಇತ್ಯರ್ಥಪಡಿಸಲಾಗಿದೆ. 378 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಯೋಜನೆ ಅಡಿಯಲ್ಲಿ ಬಾಲ್ಯವಿವಾಹ ನಿಷೇಧಕ್ಕಾಗಿ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ರಚಿಸಲಾಗಿದೆ. ಈ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಮಿತಿಗಳು ಕಾರ್ಯನಿರ್ವಹಿಸಲು ಕ್ರಮ ಜರುಗಿಸಲಾಗಿದೆ ಎಂದು ಅವರು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿಇಓ ಶುಭ ಕಲ್ಯಾಣ್ ಅವರು ಮಾತನಾಡಿ, ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಮನೋಸ್ಥೈರ್ಯ ಹೆಚ್ಚಿಸುವಂತಹ ಕೆಲಸವನ್ನು ಸಾಂತ್ವಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪ್ತಸಮಾಲೋಚಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಮತ್ತು ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಮಾರ್ಗದರ್ಶನ ಮಾಡಬೇಕು, ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಸಾಧನೆಗೆ ಪ್ರೇರಣೆ ನೀಡಬೇಕೆಂದು ಅವರು ಸಲಹೆ ನೀಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಎಂ. ಆರ್. ಕಾಮಾಕ್ಷಮ್ಮ, ಆರ್‍ಸಿಎಚ್ ಅಧಿಕಾರಿ ಕೇಶವರಾಜ್ ಮತ್ತು ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾಂತ್ವಾನ ಕೇಂದ್ರಗಳ ಆಪ್ತ ಸಮಾಲೋಚಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.