ತುಮಕೂರು:

      ಧರ್ಮದ ಮೂಲಕ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಅರುಣಾದೇವಿ ಉದಯಕುಮಾರ್ ಹೇಳಿದರು.

      ನಗರದ ಸಿದ್ದಗಂಗಾ ಮಠಕ್ಕೆ ಪತಿ ಉದಯಕುಮಾರ್, ಪುತ್ರಿ ಮಾಧುರ್ಯರವರೊಂದಿಗೆ ಭೇಟಿ ನೀಡಿದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ನಾವೆಲ್ಲರೂ ಕುಟುಂಬ ವ್ಯವಸ್ಥೆ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದರು.

      ನಾಲ್ಕು ಗೋಡೆಗಳ ಮಧ್ಯೆ ಇರುವ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ಕೆಲಸ ಮಾಡುವ ಚಿಂತನೆ ಹೊಂದಲಾಗಿದೆ ಎಂದು ಅವರು ಹೇಳಿದರು.

      ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕ ಕಾರ್ಯನಿರ್ವಹಿಸಲಿದೆ ಎಂದರು.

      ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಶ್ರೀಗಳ ಆಶೀರ್ವಾದ ಪಡೆಯಲು ಶ್ರೀಮಠಕ್ಕೆ ಬಂದಿದ್ದು, ಶ್ರೀಗಳು ಉತ್ತಮವಾಗಿ ಕೆಲಸ ಮಾಡುವಂತೆ ಆಶೀರ್ವದಿಸಿದ್ದಾರೆ ಎಂದರು.

      ಹಿರಿಯ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ ಮಾಡುವ ಇಂಗಿತ ವ್ಯಕ್ತಪಡಿಸಿದ ಅವರು, ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕು ಘಟಕಗಳಲ್ಲಿನ ಪದಾಧಿಕಾರಿಗಳು ಸಹ ಸಮಾಜ ಸೇವಾ ಕಾರ್ಯದಲ್ಲಿ ತೊಡಗುವಂತೆ ಮನವಿ ಮಾಡಿದರು.

     ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಮಹಾಸಭಾದ ಜಿಲ್ಲಾಧ್ಯಕ್ಷ ಮೋಹನಕುಮಾರ್ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಚಂದ್ರಮೌಳಿ, ಶೇಖರ್, ಟಿ.ಆರ್. ಸದಾಶಿವಯ್ಯ, ಬಿಜೆಪಿ ಮಹಿಳಾ ಘಟಕದ ಅಂಬಿಕಾ ಹುಲಿನಾಯ್ಕರ್, ಸೇರಿದಂತೆ ಎಲ್ಲ ತಾಲ್ಲೂಕು ಸಭಾದ ಅಧ್ಯಕ್ಷರು, ಪದಾಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

(Visited 11 times, 1 visits today)