ತುಮಕೂರು : 

       ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಕಾಲೇಜು ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಮತದಾರರ ಸಾಕ್ಷರತಾ ಸಂಘಗಳ ಸದಸ್ಯರುಗಳಿಗೆ ವಿವಿಧ ಸ್ಪರ್ಧೆಗಳನ್ನು ಇತ್ತೀಚಿಗೆ ಏರ್ಪಡಿಸಲಾಗಿತ್ತು.

      ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಮತದಾರರ ಸಾಕ್ಷರತಾ ಸಂಘಗಳ ಸದಸ್ಯರುಗಳಿಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಸ್ವರ್ಧೆಗಳನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಟಿ.ಕೆ.ರಮೇಶ್ ಉದ್ಘಾಟಿಸಿ ಮಾತನಾಡುತ್ತಾ, 2021ರ ಜನವರಿ 25ರಂದು “ರಾಷ್ಟ್ರೀಯ ಮತದಾರರ ದಿನಾಚರಣೆ” (National Voters Day) ಆಚರಿಸುವ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವಭಾವಿಯಾಗಿ ವಿವಿಧ ಸ್ಪರ್ಧೆ ಸೇರಿದಂತೆ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

      ಮತದಾರ ಸಾಕ್ಷರತಾ ಸಂಘಗಳನ್ನು ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸುವುದು ಈ ಸ್ಪರ್ಧೆಯ ಉದ್ದೇಶವಾಗಿದೆ ಎಂದರಲ್ಲದೇ ವಿದ್ಯಾರ್ಥಿಗಳು ತಮ್ಮ ಮನೆ ಹಾಗೂ ಪಕ್ಕದ ಮನೆಯ ಸದಸ್ಯರು, ಗ್ರಾಮದ ಮತದಾರರಿಗೆ ಮತದಾನದ ಮಹತ್ವದ ಕುರಿತು ಸಾಕ್ಷರತೆ ನೀಡಬೇಕು ಎಂದರು.

      ಕೋವಿಡ್-19 ಹಿನ್ನಲೆಯಲ್ಲಿ ಮತದಾರರ ಸಾಕ್ಷರತಾ ಸಂಘಗಳ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಸಲುವಾಗಿ ಈಗಾಗಲೇ ಹಮ್ಮಿಕೊಂಡಿದ್ದ ಆನ್‍ಲೈನ್/ಆಫ್‍ಲೈನ್ ಮೂಲಕ ಶಾಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಚುನಾವಣಾ ವಿಷಯ ಕುರಿತು ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ದೆ, ಕ್ವಿಜ್ ಮತ್ತು ಕೊಲೇಜ್ ಮೇಕಿಂಗ್ ಚಟುವಟಿಕೆಗಳಲ್ಲಿ ವಿಜೇತರಾಗಿ ಮೊದಲ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇಂದು ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

      ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದಲಿಂಗಪ್ಪ ಮಾತನಾಡಿ, ವಿದ್ಯಾರ್ಥಿಗಳು ಮತದಾರರ ರಾಯಭಾರಿಗಳಾಗಿ ಕೆಲಸ ನಿರ್ವಹಿಸುವುದರೊಂದಿಗೆ ಪ್ರಜಾಪ್ರಭುತ್ವದಲ್ಲಿರುವ ಸಾಂವಿಧಾನಿಕ ಹಕ್ಕು, ಜವಾಬ್ದಾರಿ, ಸದೃಢ ಮತ್ತು ಸಮೃದ್ಧ ಸರ್ಕಾರ ರಚನೆಗೆ ಮತದಾರರ ಪಾತ್ರದ ಬಗ್ಗೆ ಬೇರೆಯವರಿಗೆ ಅರಿವು ಮೂಡಿಸಬೇಕೆಂದರು.

      ಕಾಲೇಜು ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪನಿರ್ದೇಶಕ ನರಸಿಂಹಮೂರ್ತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ಅಭಿಯಂತರ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಜಿ.ಆರ್. ಶ್ರೀನಿವಾಸ್, ಐಇಸಿ ಸಂಯೋಜಕ ಟಿ.ಕೆ. ವಿನುತ್, ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ/ ಬೋಧಕೇತರ ವೃಂದ ಹಾಗೂ ಜಿಲ್ಲಾ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಹಾಜರಿದ್ದರು.

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ:-

       ನಂತರ ನಗರದ ಆರ್ಯನ್ ಪ್ರೌಢಶಾಲೆಯ ಆವರಣದಲ್ಲಿ ತುಮಕೂರು ಶೈಕ್ಷಣಿಕ ಜಿಲ್ಲೆಯ 6 ತಾಲ್ಲೂಕುಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ರಸಪ್ರಶ್ನೆ ಕಾರ್ಯಕ್ರಮದ ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

      ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿವೈಪಿಸಿ ರಂಗಧಾಮಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ತುಮಕೂರು ಶೈಕ್ಷಣಿಕ ಜಿಲ್ಲೆಯ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದಲ್ಲಿಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

     ನಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಟಿ.ಕೆ.ರಮೇಶ್ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದೆಂಬ ಘೋಷವಾಕ್ಯದೊಂದಿಗೆ ಮತದಾರರ ಜಾಗೃತಿ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

     ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡುತ್ತಾ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾವುದೇ ವ್ಯಕ್ತಿಯನ್ನು ಆಯ್ಕೆಮಾಡುವ ಅಧಿಕಾರವನ್ನು ನಮ್ಮ ಸಂವಿಧಾನವು ಮತದಾರರಿಗೆ ನೀಡಿದೆ. ಈ ನಿಟ್ಟಿನಲ್ಲಿ ಯುವ ಪೀಳಿಗೆ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಅರ್ಹ ವ್ಯಕ್ತಿಗೆ ಮತ ಚಲಾಯಿಸಬೇಕು. ಆಗ ಮಾತ್ರ ನೈತಿಕವಾಗಿ ಚುನಾಯಿತ ಪ್ರತಿನಿಧಿಗಳಿಗೆ ಪ್ರಶ್ನೆ ಕೇಳಲು ಆತ್ಮಸ್ಥೈರ್ಯವಿರುತ್ತದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ವ್ಯಕ್ತಿಗೆ ಮತ ನೀಡಿ ಆಯ್ಕೆ ಮಾಡುವುದು ಸೂಕ್ತ ಎಂದರು.

      ಈ ಸಂದರ್ಭದಲ್ಲಿ ಡಿಡಿಪಿಐ ಸಿ.ನಂಜಯ್ಯ, ಆರ್ಯನ್ ಹೈಸ್ಕೂಲ್ ಮುಖ್ಯೋಪಾಧ್ಯಾಯ ಗೋಪಾಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಬೋಧಕ ವೃಂದದವರು ಮತ್ತಿತರು ಹಾಜರಿದ್ದರು.

 

(Visited 19 times, 1 visits today)