ತುಮಕೂರು :
ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಜುಲೈ 19 ಹಾಗೂ 22ರಂದು 130 ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ನಂಜಯ್ಯ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 21729 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 21672 ವಿದ್ಯಾರ್ಥಿಗಳು ಹಾಜರಾಗಿದ್ದು, 57 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಖಾಸಗಿಯಾಗಿ 326 ಮತ್ತು 1469 ಪುನಾರವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕೋವಿಡ್ ಮಾರ್ಗಸೂಚಿ ಅನ್ವಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ, ಪ್ರತಿ ವಿದ್ಯಾರ್ಥಿಯನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಹಾಜರಾಗುವಂತೆ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಇಲಾಖಾಧಿಕಾರಿಗಳು ಪೋಷಕರನ್ನು ಸಂಪರ್ಕಿಸಿ ಗರಿಷ್ಠ ಹಾಜರಾತಿಗೆ ಕ್ರಮ ವಹಿಸಿದ್ದರು.
ಗುಬ್ಬಿ ತಾಲೂಕಿನಲ್ಲಿ ಜುಲೈ 19ರಂದು ಪರೀಕ್ಷೆಗೆ ಗೈರು ಹಾಜರಾಗಿದ್ದ ನಾಗಸಂದ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಲ್ಮಾನ್ ಹಾಗೂ ಕಡಬಾ ಕೆಪಿಎಸ್ ಶಾಲೆಯ ವಿದ್ಯಾರ್ಥಿ ಹರ್ಷವರ್ಧನ ಇ ಆಚಾರಿಯನ್ನು ಪ್ರೇರೇಪಿಸಿ ಜುಲೈ 22ರ ಪರೀಕ್ಷೆಗೆ ಹಾಜರಾಗುವಂತೆ ಮಾಡಿದ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಕ್ರಮ ವಹಿಸಿದ್ದನ್ನು ಅವರು ಶ್ಲಾಘಿಸಿದ್ದಾರೆ.
ನಿಮಾನ್ಸ್ ಆಸ್ಪತ್ರೆಯಲ್ಲಿ ಇದ್ದ ಚಿಕ್ಕನಾಯಕನಹಳ್ಳಿ ತಾಲೂಕು ಸರ್ಕಾರಿ ಪ್ರೌಢಶಾಲೆಯ ಬಸವರಾಜು ಎಂಬ ವಿದ್ಯಾರ್ಥಿಯು ಕಾತ್ರಿಕೆಹಾಳ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕೆಂದು ಆಕಾಂಕ್ಷೆ ವ್ಯಕ್ತಪಡಿಸಿದ್ದರಿಂದ ವೈದ್ಯರ ಸಲಹೆ ಮೇರೆಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.
ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಸಹಕರಿಸಿದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಮತ್ತು ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದ್ದಾರೆ.