ತುಮಕೂರು :
ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಪ್ರಸವ ಸಂದರ್ಭದಲ್ಲಿ ಸಂಭವಿಸುವ ತಾಯಿ ಹಾಗೂ ಶಿಶು ಮರಣವನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಒಟ್ಟು 27 ತಾಯಿಯ ಮರಣ ಹಾಗೂ ಒಟ್ಟು 113 ಶಿಶು ಮರಣ ಪ್ರಕರಣಗಳು ದಾಖಲಾಗಿವೆ.
2021ರ ಜುಲೈನಿಂದ ಅಕ್ಟೋಬರ್ ಮಾಹೆಯ ಅಂತರದಲ್ಲಿ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜು, ಖಾಸಗಿ ಆಸ್ಪತ್ರೆಗಳಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಚಿ.ನಾ.ಹಳ್ಳಿ, ಮಧುಗಿರಿ, ತಿಪಟೂರು ಹಾಗೂ ತುಮಕೂರು ತಾಲೂಕಿನಲ್ಲಿ ತಲಾ 1, ಪಾವಗಡ-3, ತುರುವೇಕೆರೆ-2 ಸೇರಿದಂತೆ ಒಟ್ಟು 9 ಮಂದಿ ತಾಯಂದಿರು ಸಾವನ್ನಪ್ಪಿರುತ್ತಾರೆ. ಮುಂದಿನ ದಿನಗಳಲ್ಲಿ ಈ ಮರಣ ಪ್ರಮಾಣವನ್ನು ನಿಯಂತ್ರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಪ್ರಯತ್ನದಿಂದ ಜಿಲ್ಲೆಯಲ್ಲಿ ಮೊದಲನೇ ಡೋಸ್ ಲಸಿಕೆ ನೀಡುವಲ್ಲಿ ಶೇ.93ರಷ್ಟು ಹಾಗೂ 2ನೇ ಡೋಸ್ ಲಸಿಕೆ ನೀಡುವಲ್ಲಿ ಶೇ.63ರಷ್ಟು ಗುರಿ ಸಾಧಿಸಲಾಗಿದೆ. ಈ ಮಾಹೆಯ ಎರಡನೇ ವಾರದದೊಳಗೆ ನಿಗಧಿತ ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ ಇಲಾಖೆಗಳಿಗೆ ಅಭಿನಂದನೆಗಳನ್ನು ತಿಳಿಸಿದರಲ್ಲದೆ, ಅದೇ ರೀತಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮೊರೆ ಹೋಗುವ ಗರ್ಭಿಣಿ ಸ್ತ್ರೀಯರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ದೊರೆಯುವ ಉಚಿತ ಸೌಲಭ್ಯಗಳ ಕುರಿತ ಹಾಗೂ ಮಗುವಿನ ಆರೈಕೆ ಕುರಿತ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ನೀಡುವ ಮೂಲಕ ಮರಣ ಪ್ರಮಾಣವನ್ನು ನಿಯಂತ್ರಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.
ಶಿಶು ಮರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಕಡಿಮೆ ತೂಕ, ಜಾಂಡೀಸ್, ಪೋಲಿಯೋ, ಟಿಬಿ, ಅವಧಿ ಮುನ್ನ ಜನನ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದ ಪ್ರತೀ ತಾಲೂಕಿನಲ್ಲಿ ಒಟ್ಟು 113 ಶಿಶು ಮರಣ ಪ್ರಕರಣ ದಾಖಲಾಗಿವೆ.ಮುಂದಿನ ದಿನಗಳಲ್ಲಿ ಶಿಶು ಮರಣ ಪ್ರಮಾಣ ಹೆಚ್ಚಿರುವ ತಾಲೂಕುಗಳಲ್ಲಿ ಆಸ್ಪತ್ರೆಗಳಿಗೆ ಬೇಕಾದ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಜಿಲ್ಲೆಯನ್ನು ತಂಬಾಕು ಮುಕ್ತಗೊಳಿಸಬೇಕು ಎಂದರಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳಲ್ಲಿ ತಂಬಾಕು ವ್ಯಸನದ ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ, ಡಿಹೆಚ್ಒ ಡಾ. ನಾಗೇಂದ್ರಪ್ಪ, ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಿಮಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮೋಹನ್ ದಾಸ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಕೇಶವ್ರಾಜ್ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.