ತುಮಕೂರು :
ಜಿಲ್ಲೆಯಲ್ಲಿ ಕೊರೋನಾ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿತ್ಯ 3400 ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ತುಮಕೂರು ತಾಲೂಕು 700 ಹಾಗೂ ಎಲ್ಲಾ ತಾಲೂಕುಗಳು ಪ್ರತಿದಿನ ತಲಾ 350ರಂತೆ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು. ಪಾಸಿಟೀವ್ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ನಡೆಸಬೇಕು ಹಾಗೂ ಪರೀಕ್ಷೆ ನಡೆಸಿರುವ ಕುರಿತು 2 ದಿನಗಳೊಳಗೆ ವರದಿ ನೀಡಬೇಕು. ನಿಗಧಿತ ಸಮಯದೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಕೋವಿಡ್ ಪರೀಕ್ಷೆಗೊಳಪಡಿಸಿದ 24 ಗಂಟೆಗಳೊಳಗೆ ವರದಿ ಸಿದ್ಧಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ 64 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ತೀವ್ರ ನಿಗಾ ಘಟಕದಲ್ಲಿರುವ ಯಾವುದೇ ಪ್ರಕರಣ ಗಳು ಇರುವುದಿಲ್ಲ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮತ್ತು ಕೋವಿಡ್ ಲಕ್ಷಣಗಳು ಕಂಡು ಬಂದವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಉಪಸ್ಥಿತರಿದ್ದರು.