ತುಮಕೂರು :
ತುಮಕೂರು ನಗರದ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಮಾತ್ರವಲ್ಲದೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ನೀಡಿದ್ದು, ತುಮಕೂರು ನಗರವನ್ನು ಬೆಂಗಳೂರಿನ ಉಪನಗರವನ್ನಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.
ಪಾಲಿಕೆ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಸ್ಮಾರ್ಟ್ ಸಿಟಿಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಮೊದಲನೇ ಸ್ಥಾನದಲ್ಲಿದ್ದು, ದೇಶದಲ್ಲಿ ಒಂಭತ್ತನೇ ಸ್ಥಾನ ಪಡೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಸ್ಮಾರ್ಟ್ ಸಿಟಿಯಲ್ಲಿ ಅವ್ಯವಸ್ಥೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಲಾಗುವುದು. ಯೋಜನೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಅರಿವಿದ್ದು, ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದ ಅವರು, ನಗರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯನ್ನು ಜಾರಿಗೊಳಿಸುವುದರಿಂದ ಜನರಿಗೂ ಅನುಕೂಲವಾಗುವುದಲ್ಲದೆ ಸರಕಾರಕ್ಕೂ ಆದಾಯ ಬರುವ ಜೊತೆಗೆ ಹೆಚ್ಚಿನ ಮೂಲಸೌಕರ್ಯ ಕಲ್ಪಿಸಲೂ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಬರುವ ಫೆಬ್ರವರಿ ಮಾಹೆಯಲ್ಲಿ ನಗರ ಪರ್ಯಟನೆ ಮಾಡಿ ಸ್ಮಾರ್ಟ್ ಸಿಟಿ ಯೋಜನೆ ಮತ್ತು ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡುತ್ತೇನೆ.
ನಗರದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಸಂಸದ ಜಿ.ಎಸ್.ಬಸವರಾಜು, ಮೇಯರ್ ಬಿ.ಜಿ.ಕೃಷ್ಣಪ್ಪ, ಉಪ ಮೇಯರ್ ನಾಜಿಮಾಬೀ ಉಪಸ್ಥಿತರಿದ್ದರು.