ತುಮಕೂರು :
ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡವರಿಗೆ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುರುತಿನ ಚೀಟಿ ವಿತರಿಸಿದ ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗಣರಾಜ್ಯೋತ್ಸವ ಆಚರಣೆಯ ವಜ್ರಮಹೋತ್ಸವದ ನೆನಪಿಗಾಗಿ 2011ರಿಂದ ರಾಷ್ಟ್ರವ್ಯಾಪಿ ಮತದಾರ ದಿನವನ್ನು ಆಚರಿಸುತ್ತ ಬಂದಿದ್ದು, ಮತದಾನದ ಮಹತ್ವವನ್ನು ಅರಿಯುವ ಅಗತ್ಯವಿದೆ. ಹೆಸರು ನೋಂದಾಯಿಸಿದ ಅರ್ಹರು ಶೇ.100ರಷ್ಟು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂವಿಧಾನದತ್ತವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಕೂಡ ಮತದಾನದ ಹಕ್ಕನ್ನು ಚಲಾಯಿಸುವ ಅಧಿಕಾರ ಹೊಂದಿರುತ್ತಾನೆ. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ತಮ್ಮ ಮೂಲಭೂತ ಹಕ್ಕನ್ನು ಚಲಾಯಿಸಬೇಕು.
ಯಾರೊಬ್ಬರೂ ಮತದಾನದಿಂದ ಹೊರಗುಳಿಯುವಂತಿಲ್ಲ ಎಂಬುದು ಚುನಾವಣಾ ಆಯೋಗದ ಧ್ಯೇಯವಾಕ್ಯವಾಗಿದೆ ಎಂದು ತಿಳಿಸಿದರು. ನಂತರ ಮತದಾನದ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪ ವಿಭಾಗಾಧಿಕಾರಿ ವಿ.ಅಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ತಹಶೀಲ್ದಾರ್ ಜಿ.ವಿ. ಮೋಹನ್ ಕುಮಾರ್, ಚುನಾವಣಾ ಶಾಖೆಯ ಮುಖ್ಯಸ್ಥರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.