ತುಮಕೂರು :
ಹಿಜಾಬ್ ವಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಯು ಉಚ್ಚ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾದ್ಯಂತ ಫೆಬ್ರುವರಿ 14 ರಿಂದ ಮುಂದಿನ ಆದೇಶದವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆದೇಶ ಹೊರಿಡಿದ್ದಾರೆ.
ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಹಿಜಾಬ್ ಪ್ರಕರಣ ಹಾಗೂ ಇತರೆ ಪ್ರಕರಣಗಳಲ್ಲಿ ಶಾಲಾ ಕಾಲೇಜುಗಳನ್ನು ಪುನರಾರಂಭಿಸುವಂತೆ ಮಧ್ಯಂತರ ಆದೇಶದಲ್ಲಿ ಫೆಬ್ರುವರಿ 14 ರಿಂದ 9 ಮತ್ತು 10ನೇ ತರಗತಿಯನ್ನು ಪ್ರಾರಂಭಿಸಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ಈ ಆದೇಶವನ್ನು ಹೊರಡಿಸಲಾಗಿದೆ.
ಈ ನಿಷೇಧಾಜ್ಞೆಯು ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ ಅನುದಾನರಹಿತ ಶಾಲೆಯ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುತ್ತದೆ. ನಿಷೇಧಾಜ್ಞೆ ಅವಧಿಯಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿರುವ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ನಿಷೇಧಿತ ಪ್ರದೇಶದ ಶಾಲಾ ಆವರಣದಲ್ಲಿ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ಯಾವುದೇ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೆಲವು ಅವಶ್ಯಕ ಸಂದರ್ಭಗಳಲ್ಲಿ ಮಾತ್ರ ವಿದ್ಯಾರ್ಥಿಗಳ ಪಾಲಕರು/ಪೋಷಕರು, ಶಾಲೆಯ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅನುಮತಿ ಪಡೆದು ಶಾಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು. ನಿಷೇಧಿತ ಪ್ರದೇಶದಲ್ಲಿರುವ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಸದರಿ ಅಂಗಡಿಗಳಲ್ಲಿ ಹೆಚ್ಚಿನ ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಮತೀಯ ಭಾವನೆಗಳಿಗೆ ಭಂಗ ತರುವಂತಹ ಚಟುವಟಿಕೆಗಳು ನಡೆದಲ್ಲಿ ಸಂಬಂಧಪಟ್ಟ ಅಂಗಡಿ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮವಹಿಸಲಾಗುವುದು. ನಿಷೇಧಿತ ಪ್ರದೇಶದಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದು, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದು ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ, ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸೂಚಿಸಿದ್ದಾರೆ.