ತುಮಕೂರು :
ಮಾನವ ಮಲ ತ್ಯಾಜ್ಯ ನಿರ್ವಹಣೆ ಕುರಿತು ವಿಸ್ತøತ ಯೋಜನಾ ವರದಿಯನ್ನು ತಯಾರಿಸಿ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ತಿಪಟೂರು, ಶಿರಾ, ತುರುವೇಕೆರೆ ತಾಲ್ಲೂಕುಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಶನ್ ಸಭೆಯಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಶನ್ ಯೋಜನೆಯಡಿ ಪ್ರತಿ ಮನೆಗೂ 55 ಲೀ. ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಪ್ರಮುಖ ಉದ್ದೇಶವಾಗಿದೆ ಜಿಲ್ಲೆಯಲ್ಲಿ ಈಗಾಗಲೇ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗಿದ್ದು, ಬಾಕಿ ಉಳಿದಿರುವ ಜನ ವಸತಿಗಳಿಗೂ ಯೋಜನೆಯನ್ನು ವಿಸ್ತರಿಸುವ ಉದ್ದೇಶದಿಂದ ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಜಲ ಜೀವನ್ ಮಿಶನ್ ಯೋಜನೆಯಡಿ ಬಾಕಿ ಇರುವ ಜನ ವಸತಿ ಪ್ರದೇಶದಲ್ಲಿರುವ ಮನೆಗಳಿಗೆ ನಲ್ಲಿ ನೀರು ಒದಗಿಸುವ ಕುರಿತು ಕ್ರಿಯಾ ಯೋಜನೆ ತಯಾರಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ದೀರ್ಘ ಕಾಲದ ಬಾಳಿಕೆಗಾಗಿ ನಿರ್ವಹಣಾ ಜವಾಬ್ದಾರಿಯನ್ನು ಖಾಸಗಿ ಏಜೆನ್ಸಿಗಳಿಗೆ ವಹಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನಾ, ಡಿಡಿಪಿಐ ಸಿ. ನಂಜಯ್ಯ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮುತ್ತಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.