ತುಮಕೂರು :

    ಪ.ಜಾತಿ.,ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜರುಗುವ ಸಭೆಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ವಿಶೇಷ ಘಟಕ(ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ(ಟಿಎಸ್‍ಪಿ)ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲೆಯಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಪ.ಜಾತಿ ಮತ್ತು ವರ್ಗದವರ ಅಭಿವೃದ್ಧಿಗಾಗಿ ನಿಗಧಿಯಾಗಿದ್ದ ಅನುದಾನ ಬಳಕೆಗೆ ಸಂಬಂಧಿಸಿದಂತೆ ವರ್ಷಾಂತ್ಯಕ್ಕೆ ಸಾಧಿಸಿದ ಇಲಾಖಾವಾರು ಪ್ರಗತಿ ಪರಿಶೀಲಿಸಿದ ಅವರು ಕಡಿಮೆ ಹಾಗೂ ಶೂನ್ಯ ಪ್ರಗತಿ ಸಾಧಿಸಿದ ತಿಪಟೂರು ನಗರಸಭೆ, ಚಿಕ್ಕನಾಯಕನಹಳ್ಳಿ ಪುರಸಭೆ, ಗುಬ್ಬಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಂದ ಕಡಿಮೆ ಸಾಧನೆಗೆ ಕಾರಣವೇನೆಂದು ಮಾಹಿತಿ ಪಡೆದರಲ್ಲದೆ, ನಿಗಧಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತುಮಕೂರು ಮಹಾನಗರಪಾಲಿಕೆ, ಕೊರಟಗೆರೆ ಪಟ್ಟಣ ಪಂಚಾಯತಿ, ಶಿರಾ ನಗರಸಭೆಗಳ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾಯತ್ ರಾಜ್ ಇಲಾಖೆ, ತೋಟಗಾರಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಕಾರ, ಮೀನುಗಾರಿಕೆ, ಬೆಸ್ಕಾಂ, ಪಶು ಸಂಗೋಪನೆ, ರೇಷ್ಮೆ ಇಲಾಖೆಗಳು 2021-22ನೇ ಸಾಲಿನಲ್ಲಿ ಎಸ್‍ಸಿಪಿ/ ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ವೆಚ್ಚ ಮಾಡಿ ಪರಿಶಿಷ್ಟರ ಅಭ್ಯುದಯಕ್ಕೆ ವಿನಿಯೋಗಿಸಲಾಗಿದೆ ಎಂದು ಸಂಬಂಧಿಸಿದ ಇಲಾಖಾವಾರು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

     ಸಭೆಗೆ ಹಾಜರಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿರಾ ನಗರಸಭೆ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಅವರಿಗೆ ಸೂಚನೆ ನೀಡಿದರು.
      ಸಭೆಯ ನಂತರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಅಂತಿಮ ಪಟ್ಟಿಗೆ ಸಂಬಂಧಿಸಿದಂತೆ ತಹಶೀಲ್ದಾರರು/ ಮನೆ ಮಾಲೀಕರಿಂದ ಲಿಖಿತ ಮಾಹಿತಿ ಪಡೆದು ಅಂತಿಮ ಪಟ್ಟಿಯನ್ನು ತಯಾರಿಸಬೇಕೆಂದು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಆಂಜನಪ್ಪ ಅವರಿಗೆ ಸೂಚನೆ ನೀಡಿದರು.

      ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಅಲೆಮಾರಿ ಜನಾಂಗದವರಿಗೆ ನಿವೇಶನ ಒದಗಿಸಲು ತಯಾರಿಸಿರುವ ಪಟ್ಟಿಯನ್ನು ಮರು ಪರಿಶೀಲಿಸಬೇಕೆಂದು ಮುಖ್ಯಾಧಿಕಾರಿ ನಜ್ಮಾ ಅವರಿಗೆ ಸೂಚನೆ ನೀಡಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲ ಕೃಷ್ಣಪ್ಪ, ಮಹಾನಗರಪಾಲಿಕೆ ಆಯುಕ್ತೆ ರೇಣುಕಾ, ಕಾರ್ಮಿಕ ಅಧಿಕಾರಿ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 7 times, 1 visits today)