ತುಮಕೂರು :
ಮಹಿಳೆಯರಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡು ಬರುವುದರಿಂದ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆಯನ್ನು ಪಡೆಯುವುದರ ಮೂಲಕ ಕ್ಯಾನ್ಸರ್ ಕಾಯಿಲೆಯನ್ನು ತಡೆಗಟ್ಟಬಹುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ: ಕೆ.ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಸ್ಪತ್ರೆಂiÀi ಆಡಿಟೋರಿಯಂನಲ್ಲಿಂದು ಆಯೋಜಿಸಲಾಗಿದ್ದ ಬೃಹತ್ ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಆರಂಭದಲ್ಲಿಯೇ ತಪಾಸಣೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಘಟಕದ ಸಭಾಪತಿ ನಾಗಣ್ಣ ಮಾತನಾಡಿ ಈಗಾಗಲೇ ಮಧುಗಿರಿ ಹಾಗೂ ತಿಪಟೂರಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ ಎಂದರಲ್ಲದೆ, 30 ವರ್ಷ ಮೇಲ್ಪಟ್ಟ ಮಹಿಳೆಯರು ಕಡ್ಡಾಯವಾಗಿ ಕ್ಯಾನ್ಸರ್ ತಪಾಸಣೆಗೆ ಒಳಗಾಗಬೇಕು. ಕ್ಯಾನ್ಸರ್ ಕಾಯಿಲೆಯ ಬಗ್ಗೆ ಗ್ರಾಮೀಣ ಪ್ರದೇಶದ ಜನರಲ್ಲಿರುವ ಭಯವನ್ನು ಆಶಾ ಕಾರ್ಯಕರ್ತೆಯರು ದೂರಮಾಡಿ ಕ್ಯಾನ್ಸರ್ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಎನ್‍ಸಿಡಿ ವಿಭಾಗದ ಉಪನಿರ್ದೇಶಕ ಡಾ. ರಂಗಸ್ವಾಮಿ ಮಾತನಾಡಿ ಕ್ಯಾನ್ಸರ್ ತಪಾಸಣೆಗೆ ಒಳಪಡಿಸಲು ಈಗಾಗಲೇ ನೋಂದಣಿ ಮಾಡಲಾಗುತ್ತಿದ್ದು, ತಪಾಸಣೆಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ನೀಡಲಾಗುವುದು. ಶಿಸ್ತುಬದ್ಧವಾದ ಜೀವನ ಶೈಲಿ ಅಳವಡಿಕೆ, ತಂಬಾಕು ಸೇವನೆಯನ್ನು ತ್ಯಜಿಸಿ ನಿಯಮಿತ ವ್ಯಾಯಾಮ ಮಾಡುವುದರಿಂದ ಕ್ಯಾನ್ಸರ್‍ನಿಂದ ದೂರವಿರಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ವೀರಭದ್ರಯ್ಯ, ಆರ್.ಸಿ.ಎಚ್.ಒ ಅಧಿಕಾರಿ ಡಾ. ಕೇಶವ್‍ರಾಜ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಸನತ್ ಕುಮಾರ್, ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಶೇಖರ್, ಉಪಾಧ್ಯಕ್ಷ ವಾಸುದೇವ್ ಹಾಗೂ ಸದಸ್ಯ ಶಿವಕುಮಾರ್, ನರ್ಸಿಂಗ್ ವಿಭಾಗದ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಶಿಬಿರಾರ್ಥಿಗಳು ಹಾಗೂ ಮತ್ತಿತರ ವೈದ್ಯಾಧಿಕಾರಿಗಳು ಹಾಜರಿದ್ದರು.