ತುಮಕೂರು:
ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿಶೇಷ ಮುತುವರ್ಜಿವಹಿಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಹಾಗೂ ಮನೆಗಳಿಗೆ ಸರಬರಾಜು ಮಾಡುವ ನೀರು ಗುಣಮಟ್ಟದಿಂದ ಕೂಡಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಮೂಲಗಳನ್ನು ಪರಿಶೀಲಿಸಿ ನೀರು ಸರಿಯಾಗಿ ಶುದ್ಧೀಕರಣವಾಗುತ್ತಿರುವ ಬಗ್ಗೆ ಹೆಚ್ಚು ಮುತುವರ್ಜಿವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ವಸೂಲಾತಿಯ ಬಗ್ಗೆ ಹೆಚ್ಚು ಗಮನ ನೀಡಬೇಕೆಂದರಲ್ಲದೇ ನಿಯಮಾವಳಿಯನ್ವಯ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ತೆರಿಗೆಯನ್ನು ವಸೂಲು ಮಾಡಲು ಕ್ರಮವಹಿಸಬೇಕೆಂದರು.
ಆಶ್ರಯ, ವಾಜಪೇಯಿ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ವಸತಿ ಮಂಜೂರಾತಿಗಾಗಿ ಪ್ರಸ್ತಾವನೆ ಕಳುಹಿಸಿಕೊಡಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಅವರು ಸಭೆಯ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಶೀಘ್ರ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಸಲ್ಲಿಸಬೇಕೆಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸಫಲ-ವಿಫಲ ಕೊಳವೆ ಬಾವಿಗಳ ಸಂಪೂರ್ಣ ಮಾಹಿತಿಯಿರಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ತೆರೆದ ಕೊಳವೆ ಬಾವಿಗಳನ್ನು ಹಾಗೆ ಬಿಡದೆ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿಗಳು, ತಹಶಿಲ್ದಾರರಿಗೆ ಸೂಚಿಸಿದರು.
ಕೋವಿಡ್ ತಡೆಗಟ್ಟಲು ಲಸಿಕಾಕರಣ ಮುಂದುವರೆದಿದ್ದು ಮೊದಲ ಡೋಸ್ ಶೇ.100 ರಷ್ಟು ಪೂರ್ಣಗೊಂಡಿದೆ. ಎರಡನೇ ಡೋಸ್ ಶೇ.97ರಷ್ಟಾಗಿದ್ದು ಶೇ.100ರಷ್ಟು ಪೂರ್ಣಗೊಳಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಿಗಧಿಪಡಿಸಿರುವ ದಿನಗಳಂದು ನಡೆಯಲಿರುವ ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕಲ್ಲದೆ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕೆಂದು ತಾಲ್ಲೂಕು ಆಡಳಿತಕ್ಕೆ ಅವರು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಮಾತನಾಡಿ ಸಮಗ್ರ ಸಾರ್ವಜನಿಕ ಕುಂದು-ಕೊರತೆ ನಿವಾರಣಾ ವ್ಯವಸ್ಥೆ (IPಉಖS)ಯಡಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕೆಂದರಲ್ಲದೇ, ಆಧಾರ್‍ಕಾರ್ಡ ಸೀಡಿಂಗ್ ಕೆಲಸಗಳನ್ನು ಪೂರ್ಣಗೊಳಿಸಲು ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.
ಭೂಮಿ ಪೆಂಡೆನ್ಸಿ, ಪೈಕಿ ಪಹಣಿ, 3/9 ಮಿಸ್ ಮ್ಯಾಚ್, ಕಂದಾಯ ಗ್ರಾಮ ರಚನೆ, ನಾಡ ಕಚೇರಿ ಪ್ರಗತಿ ಪರಿಶೀಲನೆ, ರೈಲ್ವೆ ಭೂ ಸ್ವಾಧೀನ ಸೇರಿದಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಸಿಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ|| ಕೇಶವರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಮೋಹನ್‍ದಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.
(Visited 9 times, 1 visits today)