ತುಮಕೂರು:


ಭಾರತ ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ನಗರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು.
ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಗರದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಉಪವಿಭಾಗಾಧಿಕಾರಿ ವಿ. ಅಜಯ್, ತಹಶೀಲ್ದಾರ್ ಮೋಹನ್‍ಕುಮಾರ್ ಅವರು ತೆರಳಿ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು.
ನಗರದ ಉಪ್ಪಾರಹಳ್ಳಿಯ ವಾಸವಾಗಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್. ರೇವಣ್ಣ, ಬಿ.ಜಿ. ಪಾಳ್ಯ ವೃತ್ತದಲ್ಲಿರುವ ಟಿ.ಸಿ. ಜಯರಾಮ್ ಹಾಗೂ ಚಿಕ್ಕಪೇಟೆಯಲ್ಲಿರುವ ಟಿ.ಕೆ. ರಾಜಣ್ಣ ಅವರ ಮನೆಗಳಿಗೆ ತೆರಳಿದ ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಅಜಯ್, ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗಿದೆ. ಹೀಗಾಗಿ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ನಿರ್ದೇಶನದಂತೆ ನಗರ ಹಾಗೂ ಎಲ್ಲ ತಾಲ್ಲೂಕಿನಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಗೌರವ ಸಲ್ಲಿಸುವ ಕೆಲಸವನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ರಾಜ್ಯಪಾಲರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಗೌರವ ಸಲ್ಲಿಸುತ್ತಿದ್ದಾರೆ. ಹಾಗೆಯೇ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ತಹಶೀಲ್ದಾರರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್‍ಕುಮಾರ್, ಆರ್.ಐ. ಶಿವಣ್ಣ, ಗ್ರಾಮ ಲೆಕ್ಕಿಗರಾದ ದೇವರಾಜು, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)