ತುಮಕೂರು:
ಮನೆ ಮೆನೆಯ ಮೇಲೆ ತಿರಂಗ ಧ್ವಜವನ್ನು ಹಾರಿಸುತ್ತೇವೆ ಎಂದು ಹೇಳುವ ಬಿಜೆಪಿಗೆ ಧ್ವಜ ಹಾರಿಸುವ ನೈತಿಕತೆ ಇಲ್ಲ ಎಂದು ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಇಲಾಹಿ ಸಿಖಂದರ್ ಆರೋಪಿಸಿದರು.
ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಎಂದು ಹೇಳುವ ಬಿಜೆಪಿ ಮುಖಂಡರು ಮನೆಮನೆಯ ಮೇಲೆ ತಿರಂಗ ಧ್ವಜವನ್ನು ಹಾರಿಸುತ್ತೇವೆ ಎಂದು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಹಾರಿಸುವ ನೈತಿಕತೆ ಅವರಿಗೆ ಇಲ್ಲ. ಇದು ಕೇವಲ ನಾಟಕವಾಗಿದ್ದು, ಜನರು ಇದನ್ನು ಪ್ರಶ್ನಿಸಬೇಕಾಗಿದೆ ಎಂದು ಟೀಕಿಸಿದರು.
ದೇಶದಲ್ಲಿ ಜನಸಾಮಾನ್ಯರ ನಿರುದ್ಯೋಗ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅಮೃತ ಮಹೋತ್ಸವವನ್ನು ಆಚರಿಸುವ ಸ್ಥಿತಿಯಲ್ಲಿ ನಾವು ಇದ್ದೇವೆಯೇ ಎಂದು ಆಲೋಚಿಸಬೇಕಾದ ಪರಿಸ್ಥಿತಿ ಇದೆ ಎಂದು ಸಿಖಂದರ್ ಹೇಳಿದರು.
ಇಂತಹ ಸಂಕಷ್ಟದ ಸಮಯದಲ್ಲಿ ನಮಗೆ ನಿರುದ್ಯೋಗದಿಂದ ಸ್ವಾತಂತ್ರ್ಯ ಬೇಕಾಗಿದೆ. ಬೆಲೆ ಏರಿಕೆಯಿಂದ ಸ್ವಾತಂತ್ರ್ಯ ಬೇಕಾಗಿದೆ. ಅನಗತ್ಯ ಮತ್ತು ಗೊಂದಲದ ಗೂಡಾಗಿರುವ ಜಿಎಸ್.ಟಿ.ಯಿಂದ ನಮಗೆ ಸ್ವಾತಂತ್ರ್ಯ ಬೇಕಾಗಿದೆ ಎಂದು ಅವರು ತಿಳಿಸಿದರು.
ನಿತ್ಯವೂ ಜನರು ಸಂಕಟದಿಂದ ನರಳುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಬದಲಿಗೆ ಕೋಮುವಾದಕ್ಕೆ ಪ್ರಚೋದನೆ ನೀಡುತ್ತ ಯುವಪೀಳಿಗೆಯನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಆಪಾದಿಸಿದರು.