ತುಮಕೂರು
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಆಸಕ್ತಿ ವಹಿಸಿ ಪಾಲ್ಗೊಳ್ಳಬೇಕು ಎಂದು ಶಾಸಕ ಜ್ಯೋತಿಗಣೇಶ್ ಕರೆ ನೀಡಿದರು.
ನಗರದ ಎಸ್‍ಎಸ್‍ಐಟಿ ಆವರಣದಲ್ಲಿ ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶಪಾಲರ ಸಂಘ, ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಹಾಗೂ ಬೋಧಕೇತರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಪಾಠದ ಕಲಿಕೆಯ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಮಾನಸಿಕ-ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಬೇಕು. ಈ ಮೂಲಕ ಕ್ರೀಡೆಯ ಬಗ್ಗೆ ಪ್ರತಿಯೊಬ್ಬರೂ ಒಲವು ತೋರಬೇಕು ಎಂದರು.
ಕ್ರೀಡೆಯಲ್ಲಿ ಭಾಗವಹಿಸಿದರೆ ಕ್ರೀಡಾಪಟುಗಳಾದರೆ ಮುಂದಿನ ದಿನಗಳಲ್ಲಿ ಉದ್ಯೋಗದಲ್ಲೂ ಮೀಸಲಾತಿಯೂ ಸಿಗಲಿದೆ. ಹಾಗಾಗಿ ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಗೂ ಒತ್ತು ನೀಡಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲೂ ಪಾಲ್ಗೊಳ್ಳುವಂತಾಗಲಿ ಎಂದು ಆಶಿಸಿದರು.
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ವದ ಘಟ್ಟ. ಹಾಗಾಗಿ ಪದವಿ ಪೂರ್ವ ಶಿಕ್ಷಣವನ್ನು ವಿದ್ಯಾರ್ಥಿಗಳು ಅತ್ಯಂತ ಆಸಕ್ತಿದಾಯಕವಾಗಿ ಕಲಿಕೆಯಬೇಕು. ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳು ಬದುಕಿನ ತಿರುವು ಕಂಡುಕೊಳ್ಳುವ ಪ್ರಮುಖ ಹಂತವಾಗಿದೆ ಎಂದರು.
ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಕ್ರೀಡೆಯ ಬಗ್ಗೆ ಆಸಕ್ತಿ ತೋರಬೇಕು. ಕಾಲೇಜುಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಶಿಕ್ಷಣದ ಜತೆಗೆ ಕ್ರೀಡಾ ಕ್ಷೇತ್ರದಲ್ಲೂ ಸಾಧನೆ ಮಾಡಬೇಕು ಎಂದು ಹೇಳಿದರು.
ಪ.ಪೂ. ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಂಚಾಲಕರಾದ ಟಿ.ಆರ್. ಬಸವರಾಜು ಮಾತನಾಡಿ, ಈ ಕ್ರೀಡಾಕೂಟ 4 ದಿನಗಳ ಕಾಲ ನಡೆಯಲಿದ್ದು, ಕ್ರೀಡಾಪಟುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ 10 ತಾಲ್ಲೂಕಿನಿಂದ 800 ಕ್ರೀಡಾಕೂಟಗಳು ಭಾಗವಹಿಸಿದ್ದು, ಬಾಲಕರು ಮತ್ತು ಬಾಲಕಿಯರ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಸಂಘದ ಅಧ್ಯಕ್ಷ ಲಿಂಗದೇವರು, ಕೃಷ್ಣಮೂರ್ತಿ, ಮಹಾಲಿಂಗೇಶ್, ಗೋಪಾಲಕೃಷ್ಣ, ಬಸವರಾಜು, ಪ್ರದೀಪ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.