ತುಮಕೂರು


ದಲಿತ, ಶೋಷಿತ ಕುಟುಂಬಗಳ ಮಕ್ಕಳ ಅಭ್ಯುದಯಕ್ಕಾಗಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ವಸತಿ ಶಾಲಾ ಕಟ್ಟಡಗಳನ್ನು ರಾಜ್ಯಾದ್ಯಂತ ಸರ್ಕಾರ ನಿರ್ಮಾಣ ಮಾಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಕರೆ ನೀಡಿದರು.
ಅವರು ಇಂದು ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ನರಸಾಪುರ ಗ್ರಾಮದಲ್ಲಿ 30.43 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.
ಬಡತನದಲ್ಲಿ ಬೆಳೆದ ಡಾ: ಬಿ.ಆರ್. ಅಂಬೇಡ್ಕರ್ ಅವರು ಬಾಲ್ಯದಲ್ಲಿ ಹಲವಾರು ಕಷ್ಟಗಳನ್ನು ಎದುರಿಸಿ, ಸಮಸ್ಯೆಗಳಿಗೆ ಎದೆ ಕೊಟ್ಟು ಹೋರಾಡಿ ದೇಶಕ್ಕಾಗಿ ಕೊಡುಗೆ ನೀಡಿದ್ದಾರೆ, ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಯಂತೆ ಕೆಲಸ ಮಾಡುತ್ತಿದೆ. ಸರ್ಕಾರ ವಸತಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದು ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು, ಎಷ್ಟೇ ಸಮಸ್ಯೆಗಳಿದ್ದರೂ ಅವುಗಳನ್ನು ಎದುರಿಸಿ ಪ್ರಗತಿಯೆಡೆಗೆ ಮುನ್ನಡೆಯಬೇಕು ಎಂದು ಸಚಿವರು ಹೇಳಿದರು.
ನಂತರ ನೇಗಲಾಲ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಶಾಸಕ ಜಿ. ಪರಮೇಶ್ವರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೇಮ ಟಿ.ಎಲ್.ಎಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ: ಶ್ರೀಧರ್, ತಹಸೀಲ್ದಾರ್ ನಹೀದಾ ಜುಂಜುಂ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

(Visited 1 times, 1 visits today)