ತುಮಕೂರು :
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಹಾಗೂ ಬಾಣಂತಿ ಯರಿಗೆ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿಗಳಾದ ಡಾ.ಕೆ.ವಿದ್ಯಾಕುಮಾರಿ ಅವರು ಮನವಿ ಮಾಡಿದ್ದಾರೆ.
ಈಗಾಗಲೇ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರಿಗೆ ಒಂದು ದಿನದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಇದ್ದು, ಪ್ರಸ್ತುತ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವು ಶೇ.51ರಷ್ಟು ಇರುತ್ತದೆ. ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಹಾಗೂ ಮಹಿಳೆಯರು ನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಸಲುವಾಗಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ಅವರುಗಳ ದೈಹಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುತ್ತಿದೆ ಎಂದರು.