ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ ವತಿಯಿಂದ ಭಾನುವಾರ(ಡಿ.02) ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂ. ಮೊತ್ತದ 23,000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ ಉಆP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು. ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ(ಡಿ.02) ಚಾಲನೆ ನೀಡಿದ ಬಳಿಕ ಮಾತನಾಡಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದ ಅವರು, ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ತಿಳಿಸಿದರು. ಮೈಸೂರಿನಲ್ಲೂ ಜಾಗ ಕೊಡ್ತೀವಿ: ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು. 41 ವರ್ಷದಿಂದ ಮಂತ್ರಿ ಆಗಿದ್ದೀನಿ, ಇಂಥಾದ್ದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು. ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು. ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.