ತುಮಕೂರು: ಸುವರ್ಣಸೌಧದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ, ಕೊಲೆ ಬೆದರಿಕೆ ಹಾಕಿ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಶಾಂತಿ, ಅರಾಜಕತೆ, ಅಭದ್ರತೆ ಸೃಷ್ಟಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ಜನರನ್ನು ವಂಚಿಸುತ್ತಾ ಬಂದಿದೆ. ತನ್ನ ಆಡಳಿತ ಹುಳುಕನ್ನು ಜನ ಪ್ರಶ್ನೆ ಮಾಡಬಾರದು ಎಂದು ವಿವಾದಗಳನ್ನು ಸೃಷ್ಟಿಮಾಡಿಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವನ್ನು ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಸ್.ಶಿವಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಉಪಾಧ್ಯಕ್ಷ ಭೈರಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಆಂಜನಪ್ಪ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ,
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚೇತನ್, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಮುಖಂಡರಾದ ಬನಶಂಕರಿಬಾಬು, ಗಣೇಶ್‌ಪ್ರಸಾದ್, ಕೆ.ಪಿ.ಮಹೇಶ್, ಧನುಷ್, ಮಲ್ಲಿಕಾರ್ಜುನ್, ಭಾಗವಹಿಸಿದ್ದರು.
(Visited 1 times, 1 visits today)