ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ, ಗುಬ್ಬಿಯಲ್ಲಿ ಹೆಚ್‌ಎಲ್‌ಎಲ್ ಆರಂಭಗೊAಡಿದೆ, ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರುಗಳೊಂದಿಗೆ ಸಮಾಲೋಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ತುಮಕೂರು ತಾಲ್ಲೂಕು ಗೂಳೂರಿನಲ್ಲಿ ಗುರುವಾರ ನಡೆದ ಗೂಳೂರು ಹೋಬಳಿ ಮಟ್ಟದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ವಿತರಣೆ ಮಾಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.
ದೂರದೃಷ್ಟಿ ಚಿಂತನೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಯೋಜನೆಗಳ ಫಲ ಜನರಿಗೆ ತಲುಪಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ತಂದು ತುಮಕೂರು ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಆರು ತಿಂಗಳಲ್ಲಿ ಸುಮಾರು 20 ರೈಲ್ವೆ ಗೇಟುಗಳಲ್ಲಿ ಮೇಲುಸೇತುವೆ, ಕೆಳಸೇತುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ನೆನೆಗುದಿಗೆ ಬಿದ್ದಿದ್ದ ರೈಲ್ವೆ ಯೋಜನೆಗಳಿಗೆ ವೇಗ ನೀಡಿ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದೆಲ್ಲವೂ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಚಿಂತನೆಯ ಫಲದಿಂದ ಸಾಧ್ಯವಾಗುತ್ತಿದೆ ಎಂದರು.
ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯ ಬಗ್ಗೆ ದೂರುಗಳು ಬರುತ್ತಿವೆ. ಪ್ರತಿ ಹಳ್ಳಿಯಲ್ಲಿ ನಡೆಯುತ್ತಿರುವ ಕೆಲಸಗಳ ಬಗ್ಗೆ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವಿ.ಸೋಮಣ್ಣ, ಯಾವುದೇ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಇಚ್ಛಾಶಕ್ತಿ ಬೆಳೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಶಾಸಕ ಬಿ.ಸುರೇಶ್‌ಗೌಡರು ಸಚಿವ ಸೋಮಣ್ಣ ಅವರ ಕಾರ್ಯವೈಖರಿ, ಅಭಿವೃದ್ಧಿ ಕಾರ್ಯಗಳಲ್ಲಿ ಇವರಿಗಿರುವ ಕಾಳಜಿ ಕೊಂಡಾಡಿ, ಸೋಮಣ್ಣನವರು ಜಿಲ್ಲೆಗೆ ನೀಡಿರುವ ಯೋಜನೆಗಳನ್ನು ವಿವರಿಸಿದರು. ಹೋಬಳಿ ಕೇಂದ್ರವಾದ ಗೂಳೂರಿನಲ್ಲಿ ಪಂಚಾಯ್ತಿ ಕಟ್ಟಡ ಇಲ್ಲದಿರುವ ಕಾರಣ ಕಟ್ಟಡಕ್ಕಾಗಿ 10 ಲಕ್ಷ ರೂ.ಅನುದಾನ ನೀಡಬೇಕು ಎಂದು ಕೋರಿದರು.
ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಅಡಿಷನಲ್ ಎಸ್ಪಿ ಮರಿಯಪ್ಪ, ತಹಶೀಲ್ದಾರ್ ರಾಜೇಶ್ವರಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್, ಭಾಗವಹಿಸಿದ್ದರು.
(Visited 1 times, 1 visits today)