ತುಮಕೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ ತುಮಕೂರು ಜಿಲ್ಲಾ ಪಂಚಾಯಿತಿಗೆ 2025ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬ-2025ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್, ಅಪರ ಮುಖ್ಯ ಕಾರ್ಯದರ್ಶಿ(ಗ್ರಾಮೀಣಾಭಿವೃದ್ಧಿ) ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್ ಕುಮಾರ್ ಮಲಪಾಟಿ ಉಪಸ್ಥಿತರಿದ್ದರು.
ನರೇಗಾ ಯೋಜನೆಯಡಿ ಜಿಲ್ಲೆಗೆ 2023-24ನೇ ಸಾಲಿಗಾಗಿ 42 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಲಾಗಿದ್ದು, 63 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಯು ಶೇಕಡ 150ರಷ್ಟು ಸಾಧನೆ ಮಾಡಿದೆ. ಈ ಯೋಜನೆಯಡಿ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಾದ ಶಾಲೆ, ಆಸ್ಪತ್ರೆ, ರಸ್ತೆ, ಚರಂಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆದ್ಯತೆ ಮೇರೆಗೆ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಪ್ರಶಸ್ತಿ ಸ್ವೀಕರಿಸುವ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಉಪ ಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ ಕೆ.ಪಿ. ಸೇರಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಭಾಗಿಯಾಗಿದ್ದರು.

(Visited 1 times, 1 visits today)