ಬೆಂಗಳೂರು:
ಎಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರ(ಹಾಲ್ ಟಿಕೆಟ್)ಗಳಲ್ಲಿ ಲೋಪದೋಷವಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಡಿ.31ವರೆಗೂ ಅವಕಾಶ ಕಲ್ಪಿಸಿದೆ.
2019ನೇ ಸಾಲಿನ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್ಲೋಡ್ ಹಾಗೂ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲ ಸರಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನಿತ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ ಅಭ್ಯರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ, ಡಿ.31ರೊಳಗೆ ತಿದ್ದುಪಡಿ ಮಾಡಿದ ಮಾಹಿತಿಯನ್ನು ಅಪ್ಲೋಡ್ ಮಾಡುವಂತೆ ಸೂಚಿಸಿದೆ.
14,796 ಶಾಲೆಗಳ ಪೈಕಿ 7328 ಶಾಲೆಗಳು ಈಗಾಗಲೇ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿದ್ದು, 7458 ಶಾಲೆಗಳು ಡೌನ್ಲೋಡ್ ಬಾಕಿ ಉಳಿಸಿಕೊಂಡಿವೆ. ಶಾಲಾ ಆಡಳಿತ ಮಂಡಳಿಗಳು www.kseesb.kar.nic.in ಈ ವೆಬ್ಸೈಟ್ಗೆ ಭೇಟಿ ನೀಡಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.