ತುಮಕೂರು:
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬರುತ್ತಿದೆ.
ರಾಜ್ಯ ಮಾತ್ರವಲ್ಲದೇ, ದೇಶದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು, ಗಣ್ಯರು ಸ್ವಾಮೀಜಿಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ದರ್ಶನ ಪಡೆದಿದ್ದು, ಸುಮಾರು 10 ಲಕ್ಷ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಸ್ವಾಮೀಜಿ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ, ಗಣ್ಯರಿಗೆ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನಿಂತು ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ವಿವಿಧ ಮಠಾಧೀಶರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಗೃಹಸಚಿವ ಎಂ.ಬಿ. ಪಾಟೀಲ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅಪಾರ ಸಂಖ್ಯೆಯ ಗಣ್ಯರು ಸ್ಥಳದಲ್ಲಿದ್ದಾರೆ.