ತುಮಕೂರು:
ಮಕ್ಕಳು ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದೇ ಮಹಾ ಭಾಗ್ಯ ಎಂದು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗಸ್ವಾಮಿ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ದಗಂಗಾ ಶಾಲೆಗಳ ಸಹಯೋಗದಲ್ಲಿ ಮಠದ ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಕ್ಕಳು ಆಲ್ಬೆಂಡಜೋಲ್ ಜಂತು ನಿವಾರಕ ಮಾತ್ರೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಯಾವುದೇ ಸಾಧನೆ ಮಾಡಲು ದೈಹಿಕ ಆರೋಗ್ಯ ಅಗತ್ಯ. ಈ ನಿಟ್ಟಿನಲ್ಲಿ ಮಕ್ಕಳು ತಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ ಮಾತನಾಡಿ, ಜಂತುಹುಳು ನಿವಾರಣೆಗೆ ಸ್ವಚ್ಛತೆ ಅವಶ್ಯ. ಜಂತುಹುಳು ಸೋಂಕಿನಿಂದ ಮಕ್ಕಳು ರಕ್ತಹೀನತೆ, ಪೌಷ್ಠಿಕಾಂಶ ಕೊರತೆ, ಹಸಿವೆಯಾಗದಿರುವುದು, ನಿಶ್ಯಕ್ತಿ ಮತ್ತು ಆತಂಕ, ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವಂತಹ ಅಪಾಯಕಾರಿ ಆರೋಗ್ಯ ಸಮಸ್ಯೆಗಳಿಂದ ಬಳಲುವ ಸಾಧ್ಯತೆ ಇರುತ್ತದೆ. ಬರಿಗಾಲಲ್ಲಿ ನಡೆಯುವುದರಿಂದ ರೋಗದ ಸೋಂಕು ತಗಲುವ ಸಾಧ್ಯತೆ ಇದ್ದು, ಎಲ್ಲ ಮಕ್ಕಳು ಚಪ್ಪಲಿ ಧರಿಸಿಯೇ ನಡೆದಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ|| ಜಿ.ಕೇಶವ್ ರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಬಾಲರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಬಿಇಒ ರಂಗಧಾಮಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಶರತ್‍ಚಂದ್ರ, ಮತ್ತಿತರರು ಉಪಸ್ಥಿತರಿದ್ದರು.