ತುಮಕೂರು:
ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿಯಿರುವ 870 ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ಶೀಘ್ರದಲ್ಲೇ ಕೆಪಿಎಸ್‍ಸಿ ಇಂದ ಅಧಿಸೂಚನೆ ಪ್ರಕಟವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ್ ತಿಳಿಸಿದರು.
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 2 ದಿನಗಳ ತುಮಕೂರು-ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸುಮಾರು 12 ಲಕ್ಷ ಪದವೀಧರ ನಿರುದ್ಯೋಗಿಗಳಿದ್ದು, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳನ್ನು ಪಟ್ಟಿ ಮಾಡಲಾಗಿದೆ. ಶೀಘ್ರದಲ್ಲೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ವಿವಿಧ ಕೋರ್ಸ್ ಮುಗಿಸಿರುವ ಯುವಕ/ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವುದಕ್ಕೆ ಇಂತಹ ಉದ್ಯೋಗ ಮೇಳಗಳು ಅತ್ಯಾವಶ್ಯ. ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವುದಕ್ಕಾಗಿ ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ದಿ ಇಲಾಖೆಯನ್ನು ಹೊಸದಾಗಿ ಸೃಜಿಸಿ ಅರ್ಹ ಫಲಾನುಭವಿಗಳಿಗೆ ವಿದ್ಯಾಭ್ಯಾಸಕ್ಕೆ ತಕ್ಕಂತೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರಲ್ಲದೆ ಈ ಮೇಳದಲ್ಲಿ ಭಾಗವಹಿಸಲು 106 ವಿವಿಧ ಕಂಪನಿಗಳ ಉದ್ಯೋಗದಾತರು ಹಾಗೂ 20ಸಾವಿರಕ್ಕೂ ಹೆಚ್ಚು ಉದ್ಯೋಗಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮೇಳವನ್ನು ನಾಟಕೀಯವಾಗಿ ತೋರಿಕೆಗಾಗಿ ಆಯೋಜಿಸಿಲ್ಲ. ನೋಂದಾಯಿಸಿಕೊಂಡಿರುವ ಎಲ್ಲರಿಗೂ ಉದ್ಯೋಗ ದೊರೆಯದೆ ಇರಬಹುದು. ಉದ್ಯೋಗಾವಕಾಶಕ್ಕಾಗಿ ಬಂದ ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಗೆ ತಕ್ಕಂತೆ ಖಂಡಿತವಾಗಿ ಉದ್ಯೋಗ ದೊರೆಯುತ್ತದೆ ಎಂದು ತಿಳಿಸಿದರು.
ಮುಂದಿನ 5 ವರ್ಷಗಳಲ್ಲಿ ಜಿಲ್ಲೆಯ ಚಿತ್ರಣ ಸಂಪೂರ್ಣ ಬದಲಾಗಲಿದೆ. ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಲು ಹೇಮಾವತಿ ನಾಲೆ ಆಧುನೀಕರಣ, 13500 ಕೋಟಿ ರೂ.ಗಳ ವೆಚ್ಚದಲ್ಲಿ ಎತ್ತಿನ ಹೊಳೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇಡೀ ಏಷ್ಯಾ ಖಂಡದಲ್ಲೇ 2ನೇ ಅತಿ ದೊಡ್ಡ ಕೈಗಾರಿಕಾ ಕ್ಷೇತ್ರವಾಗಿ ಬೆಳೆಯುತ್ತಿರುವ ವಸಂತ ನರಸಾಪುರದಲ್ಲಿ ಕೈಗಾರಿಕಾ ಪ್ರದೇಶವು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳಲಿದೆ. ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ತುಮಕೂರು ಗಣನೀಯವಾಗಿ ಬದಲಾವಣೆ ಕಾಣಲಿದೆ. ಬೆಂಗಳೂರು-ಮುಂಬೈ ಸಬರ್ ಬನ್ ರೈಲು ಮಾರ್ಗ ನಿರ್ಮಾಣ, ಬೆಂಗಳೂರು-ತುಮಕೂರು ಮೆಟ್ರೋ ರೈಲು ಸಂಚಾರ ಯೋಜನೆಗೆ ಚಿಂತನೆ ನಡೆಸಲಾಗಿದೆ ಎಂದರು.
ಮೇಳದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ತುಮಕೂರು-ಚಿತ್ರದುರ್ಗ ಜಿಲ್ಲೆಯ ಯುವಕ/ಯುವತಿಯರಿಗೆ ಈ ಮೇಳವು ಆಶಾಕಿರಣವಾಗಿದೆ. ಕಾಯಕವೇ ಕೈಲಾಸ ಎಂಬ ಮಾತಿನಂತೆ ಅಭ್ಯರ್ಥಿಗಳು ಯಾವುದೇ ಕೆಲಸ ಸಿಕ್ಕರೂ ನಿಷ್ಠೆಯಿಂದ ಮಾಡುವುದನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಮುಜರಾಯಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಮಾತನಾಡಿ ಒಂದೇ ಸೂರಿನಡಿ ನೂರಾರು ಕಂಪನಿಗಳಿಂದ ಸಾವಿರಾರು ಯುವಕ/ಯುವತಿಯರಿಗೆ ಉದ್ಯೋಗ ಕಲ್ಪಿಸಲು ಮೇಳದ ಆಯೋಜನೆ ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ವಿದ್ಯಾರ್ಹತೆಗನುಗುಣವಾಗಿ ಕೆಲಸ ದೊರೆಯುತ್ತದೆ. ನಿರುದ್ಯೋಗಿ ಯುವಕರು ಇಂತಹ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಮಿಕ ಸಚಿವ ವೆಂಕಟರಮಣಪ್ಪ ಮಾತನಾಡಿ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವವರ ಮಕ್ಕಳಿಗೆ ವಿದ್ಯಾಭ್ಯಾಸ, ಮದುವೆ ಕೆಲಸಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ 20ಲಕ್ಷ ಕಾರ್ಮಿಕರು ಇಲಾಖೆಯಲ್ಲಿ ನೋಂದಣಿಯಾಗಿದ್ದು, ಅರ್ಹರಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಸಂಸದ ಎಸ್.ಪಿ ಮುದ್ದಹನುಮೇಗೌಡ, ಚಿತ್ರದುರ್ಗ ಲೋಕಸಭಾ ಸದಸ್ಯ ಬಿ.ಎನ್. ಚಂದ್ರಪ್ಪ, ಶಾಸಕ ಜಿ.ಬಿ ಜ್ಯೋತಿಗಣೇಶ್ ಮಾತನಾಡಿದರು. ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಕೆನರಾ ಬ್ಯಾಂಕ್‍ನ ಡೆಬಿಟ್ ಕಾರ್ಡ್‍ಗಳನ್ನು ವಿತರಿಸಲಾಯಿತು. ಅರ್ಹ ಫಲಾನುಭವಿಗಳಿಗೆ ವಿದ್ಯಾಭ್ಯಾಸ, ಮದುವೆ ಮುಂತಾದವುಗಳಿಗೆ ಉಪಯೋಗವಾಗುವಂತೆ ಪ್ರೋತ್ಸಾಹ ಧನ ಚೆಕ್ ವಿತರಿಸಲಾಯಿತು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಕಂಪನಿಗಳಿಂದ ಸ್ಥಳದಲ್ಲಿಯೇ ನೇಮಕಾತಿ ಪತ್ರಗಳನ್ನು ನೀಡಲಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪಂಚಾಯತ್ ಸಿಇಒ ಶುಭ ಕಲ್ಯಾಣ್, ತಾಲೂಕು ಪಂಚಾಯಿತಿ ಅಧ್ಯಕ್ಷ ಗಂಗಾಂಜನೇಯ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಆಯುಕ್ತೆ ಜಿ. ಸತ್ಯವತಿ, ಕಾರ್ಮಿಕ ಆಯುಕ್ತ ಪಾಲಯ್ಯ, ಮಹಾನಗರ ಪಾಲಿಕೆ ಆಯುಕ್ತ ಸಿ. ಭೂಪಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನ ವಂಶಿಕೃಷ್ಣ, ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೇಳದಲ್ಲಿ ನೋಂದಾಯಿಸಿಕೊಂಡ 21155 ಉದ್ಯೋಗಾರ್ಥಿಗಳ ಪೈಕಿ 5458 ಅಭ್ಯರ್ಥಿಗಳು ಹಾಜರಾಗಿದ್ದರು.