ತುಮಕೂರು :
ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರದ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಸೌಲಭ್ಯ ಒದಗಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿಕಾರಿಗಳು ಜಾಗ ಖಾಲಿ ಮಾಡಬೇಕೆಂದು ನಿರ್ದಾಕ್ಷಿಣ್ಯವಾಗಿ ಸೂಚಿಸಿದರು. ಸಮಸ್ಯೆ ಹೇಳಿಕೊಂಡು ತಮ್ಮ ಬಳಿ ಬಂದವರಿಗೆ ಗೌರವಿಸಿ, ವಿನಾಕಾರಣ ಅಲೆದಾಡಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ನಾನು ಸುಮ್ಮನೆ ಇರುವುದಿಲ್ಲ ಎಂದು ಹೇಳಿದರಲ್ಲದೆ, ತಹಶೀಲ್ದಾರ್ ಬಳಿ ಪಹಣಿ, ಖಾತೆ ಮಾಡಿಸಲು ಬಂದವರನ್ನು ತಂದೆ ತಾಯಿಯಂತೆ ಕಾಣಬೇಕು. ಸಾರ್ವಜನಿಕರ ಜೊತೆ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್‍ನಲ್ಲಿ ನಡೆಯುವ ಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೇ ಸಂಪೂರ್ಣ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು. ಇಲಾಖಾವಾರು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಖುದ್ದು ಅಧಿಕಾರಿಗಳೇ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಭೆ ಕರೆದಾಗ ಖುದ್ದು ಅಧಿಕಾರಿಗಳೇ ಹಾಜರಾಗಬೇಕು ಎಂದು ಸೂಚನೆ ನೀಡಿದರಲ್ಲದೆ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಅರಿತು ಅವರ ಅವಶ್ಯಕತೆಗಳಿಗೆ ತಕ್ಕಂತೆ ಸೇವೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮಳೆ ಬಾರದೆ ಇರುವುದರಿಂದ ಸಮಗ್ರ ಕೃಷಿ ಪದ್ಧತಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಮಳೆ ಇಲ್ಲದೇ ಬೆಳೆಯುವ ಬೆಳೆಗಳ ಬಗ್ಗೆ ಜಿಲ್ಲೆಯ ರೈತರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ರೈತರಿಗೆ ಉದ್ಯೋಗಚೀಟಿ ಇಲ್ಲದೇ ರೈತರು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದುವರೆಗೂ ಎಷ್ಟು ಉದ್ಯೋಗ ಚೀಟಿಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಸಚಿವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಇಒ ಶುಭಾ ಕಲ್ಯಾಣ್ ಅವರು ಈವರೆಗೆ 2 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ ಅವರು ಬರೆದ ಪದ್ಮಶ್ರೀ ಪುರಸ್ಕøತೆ ಡಾ|| ಸೂಲಗಿತ್ತಿ ನರಸಮ್ಮ ಅವರ ಯೋಶೋಗಾಥೆ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು.
ಸಭೆಯಲ್ಲಿ ಸಂಸದ ಜಿ.ಎಸ್ ಬಸವರಾಜು, ಶಾಸಕ ಜಿ.ಬಿ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.