ತುಮಕೂರು:
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಕ್ಕೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಿ ಕೋಟ್ಪಾ ಕಾಯ್ದೆಯಡಿ ಹೆಚ್ಚಿನ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಕೋನ ವಂಶಿಕೃಷ್ಣ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ತಂಬಾಕಿನಿಂದಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾನೂನಿನ ಬಗ್ಗೆ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟ್ಪಾ ಕಾರ್ಯಾಚರಣೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಿಕೊಳ್ಳುವಂತೆ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕ ಮಾತನಾಡಿ, ಈವರೆಗೆ ಪೊಲೀಸ್ ಇಲಾಖಾ ವತಿಯಿಂದ ತಂಬಾಕು ನಿಯಂತ್ರಣ ಚಟುವಟಿಕೆಗಳಿಗೆ ಬೆಂಬಲ ದೊರಕಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟ್ಪಾ ಕಾರ್ಯಾಚರಣೆ ಮಾಡುವ ಮುಖೇನ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಮಾಡಬೇಕು ಎಂದು ಅವರು ಶಿಬಿರಾರ್ಥಿಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಪೊಲೀಸ್ ವರಿಷ್ಠಧಿಕಾರಿ ಜೆ.ಜೆ.ಉದೇಶ್, ಜಿಲ್ಲಾ ಸಲಹೆಗಾರ ಎಂ.ಆರ್.ರವಿಪ್ರಕಾಶ್ ಸಮಾಜ ಕಾರ್ಯಕರ್ತ ಪುಂಡಲೀಕ ಲಕಾಟಿ ಹಾಗೂ ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕಿ ರುಕ್ಮಣಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.