ತುಮಕೂರು:
ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ, ತೋವಿನಕೆರೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಬರಪೀಡಿತ ತಾಲ್ಲೂಕಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಗಳು ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ, ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಕಾರ್ಯಕ್ರಮವಾದ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೆ ಸರ್ಕಾರದ ವತಿಯಿಂದ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಇದರ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಬಸನಗೌಡ, ಕೊರಟಗೆರೆ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಶಿವಪ್ರಕಾಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ತಾಲ್ಲೂಕು ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಂಗಪ್ಪ, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.