ತುಮಕೂರು:
ಜಿಲ್ಲೆಯಲ್ಲಿ ಜೂನ್ 25 ರಿಂದ ಜುಲೈ 3ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾದ್ಯಂತ 144 ಪರೀಕ್ಷಾ ಕೇಂದ್ರ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಪಾರ ದರ್ಶಕವಾಗಿ ನಡೆಸುವ ದೃಷ್ಟಿಯಿಂದ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯು ಜೂನ್ 25 ರಿಂದ ಜುಲೈ 3ರವರೆಗೆ (ಪರೀಕ್ಷೆ ನಡೆಯುವ ದಿನಗಳಂದು) ಬೆಳಿಗ್ಗೆ 9 ರಿಂದ ಸಂಜೆ 5-30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ನಿಷೇಧಾವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ನಿಷೇಧವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು.
ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.