ತುಮಕೂರು:
ಜೂನ್ 25ರಿಂದ ಆರಂಭವಾಗುತ್ತಿರುವ ಹತ್ತನೇ ತರಗತಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ:ಕೆ.ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದರೆ ಪಾಸಿಟಿವ್ ಅಥವಾ ಪ್ರಾಥಮಿಕ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಪ್ರೆಶರ್ಸ್ ಎಂದು ಪರಿಗಣಿಸಿ ಪರೀಕ್ಷೆ ಬರೆಸುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ಎಂದರು.
ತುಮಕೂರು(ದ) ಶೈಕ್ಷಣಿಕ ಜಿಲ್ಲೆಯಲ್ಲಿ 85(8 ಬ್ಲಾಕ್ ಪರೀಕ್ಷಾ ಕೇಂದ್ರ) ಪರೀಕ್ಷಾ ಕೇಂದ್ರಗಳಿದ್ದು, 23783 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 59(9 ಬ್ಲಾಕ್ ಪರೀಕ್ಷಾ ಕೇಂದ್ರ) ಪರೀಕ್ಷಾ ಕೇಂದ್ರಗಳಿದ್ದು, 13534 ಮಕ್ಕಳು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 26 ಮಕ್ಕಳು ಕಂಟೈನ್‍ಮೆಂಟ್ ವಲಯದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದು, ಅವರಿಗೆ ಆರೋಗ್ಯ ತಪಾಸಣೆ ನಡೆಸಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಿದ್ದೇವೆ. ಅಲ್ಲದೆ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಹೆಚ್ಚುವರಿ ಕೊಠಡಿಗಳ ವ್ಯವಸ್ಥೆ ಕೂಡಾ ಇರುತ್ತದೆ. ಪ್ರತಿ ತಾಲ್ಲೂಕಿಗೆ 3 ರಿಂದ 4 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಮೀಸಲಿಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛವಾಗಿಡುವ ಕೆಲಸವನ್ನು ಆಯಾ ಗ್ರಾಮ ಪಂಚಾಯತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ವಹಿಸಿದ್ದು, ಪ್ರತಿದಿನ ಎರಡು ಬಾರಿ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಆರೋಗ್ಯ ತಪಾಸಣಾ ಕೇಂದ್ರವನ್ನು ತೆರೆದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿರುವುದನ್ನು ಖಾತ್ರಿಪಡಿಸಿಕೊಳ್ಳಲಾಗುತ್ತದೆ ಹಾಗೂ ಪ್ರತಿ ವಿದ್ಯಾರ್ಥಿಗೆ ಸ್ಯಾನಿಟೈಸ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಪ್ರತಿ 200 ಮಕ್ಕಳಿಗೆ ಒಬ್ಬ ಆರೋಗ್ಯ ಸಿಬ್ಬಂದಿ ಅಥವಾ ದೈಹಿಕ ಶಿಕ್ಷಣ ಶಿಕ್ಷಕರು ಥರ್ಮಲ್ ಸ್ಕ್ರೀನಿಂಗ್ ಮಾಡಲು ನಿರ್ದೇಶನ ನೀಡಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರದ ಹಾಗೂ ಪರೀಕ್ಷಾ ಕೊಠಡಿಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಅವರಿಗೆ ಪರೀಕ್ಷಾ ಕೇಂದ್ರದಲ್ಲಿ ಗೊಂದಲಕ್ಕೆ ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು.
ಸಾರಿಗೆ ಸೌಲಭ್ಯ : ಕೆ.ಎಸ್.ಆರ್.ಟಿ.ಸಿ. ಬಸ್‍ಗಳು ಪರೀಕ್ಷಾ ಸಮಯಕ್ಕೆ ಅನುಗುಣವಾಗಿ ಸಂಚರಿಸುತ್ತವೆ. ಪ್ರವೇಶ ಪತ್ರ ತೋರಿಸಿದಲ್ಲಿ ಪ್ರಯಾಣ ಉಚಿತವಾಗಿರುತ್ತದೆ. ಕೆ.ಎಸ್.ಆರ್.ಟಿ.ಸಿ. ಬಸ್ ಮಾರ್ಗ ಇಲ್ಲದ ಕಡೆಗಳಲ್ಲಿ ಖಾಸಗಿ ಶಾಲಾ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲೂ ಸಹ ಸಾಮಾಜಿಕ ಅಂತರ ಕಾಪಾಡಿಕೊಂಡು ಪ್ರಯಾಣ ಮಾಡುವಂತೆ ನಿರ್ದೇಶನ ನೀಡಿದ್ದೇವೆ. ಯಾವುದೇ ಕಾರಣಕ್ಕೂ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗಬಾರದು. ಇದಕ್ಕಾಗಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಪರೀಕ್ಷೆಗೆ ಸರಿಯಾದ ಸಮಯಕ್ಕೆ ಆಗಮಿಸಲು ವಿಳಂಬವಾದರೆ ಸಮಯದಲ್ಲಿ ವಿನಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಗೊಂದಲವಾಗದಂತೆ ಪರೀಕ್ಷೆ ನಡೆಯಲು ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಿದ್ದೇವೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಅಳತೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಕ್ಕಳಿಗೆ ಮುಖ್ಯವಾದ ಘಟ್ಟವಾಗಿದ್ದು, ನಿರ್ಲಕ್ಷಿಸದೆ ಪೋಷಕರಿಗೆ, ಮಕ್ಕಳಿಗೆ ಧೈರ್ಯ ತುಂಬಿ ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ||ಕೆ.ವಂಶಿಕೃಷ್ಣ, ಡಿಡಿಪಿಐ ಕಾಮಾಕ್ಷಮ್ಮ ಸೇರಿದಂತೆ ಮತ್ತಿತರರು ಇದ್ದರು.