ತುಮಕೂರು:
ತುಮಕೂರು ತಾಲ್ಲೂಕು ಪಂಚಾಯಿತಿ ಕೊನೆಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕವಿತಾ ರಮೇಶ್ ಅವರು, ಬುಧವಾರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಪ್ರಭಾರ ಅಧ್ಯಕ್ಷ ಶಾಂತಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ತಾಪಂ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕವಿತಾ ರಮೇಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕು ಪಂಚಾಯಿತಿ ಎಲ್ಲಾ ಸದಸ್ಯರ ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸುವೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ ಆಧ್ಯತೆ:
ತಾಲ್ಲೂಕು ಪಂಚಾಯಿತಿ ಕೊನೆಯ ಅವಧಿ 1 ವರ್ಷವಿದ್ದು, ಈ ಅವಧಿಯಲ್ಲಿ ತಾಲ್ಲೂಕಿನಾದ್ಯಂತ ಪ್ರವಾಸ ಮಾಡಿ, ತಾಲ್ಲೂಕಿನಲ್ಲಿ ಉದ್ಬವಿಸಿರುವ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು, ಜೊತೆಗೆ ವಿವಿಧ ಅಭಿವೃದ್ದಿ ಕಾರ್ಯಗಳ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ಮಾಡುವುದಾಗಿ ಹೇಳಿದರು.
ಭ್ರಷ್ಟಾಚಾರ ನಿರ್ಮೂಲನೆ:
ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದಿಂದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನೂತನ ಅಧ್ಯಕ್ಷೆ ಕವಿತಾ ರಮೇಶ್ ಅವರು, ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಭಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು. ನನ್ನ ಅಧಿಕಾರಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಬರದಂತೆ ಆಡಳಿತ ನಡೆಸುವುದಾಗಿ ತಿಳಿಸಿದರು.
ಗ್ರಾಪಂ ಆಡಳಿತಾಧಿಕಾರಿಗಳ ಸಭೆ:
ಗ್ರಾಮ ಪಂಚಾಯಿತಿ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆ ಯಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದ್ದು, ಗುರುವಾರ ಎಲ್ಲಾ ಆಡಳಿತಾಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸುವುದಾಗಿ ತಿಳಿಸಿದರು.
ಕೊರೋನ ನಿಯಂತ್ರಣಕ್ಕೆ ಪಣ:
ಕೋವಿಡ್-19 ಮಹಾಮಾರಿ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಾಲ್ಲೂಕಿನಲ್ಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದುದರಿಂದ ತಾಲ್ಲೂಕಿನಲ್ಲಿ ಕೊರೋನ ನಿಯಂತ್ರಣಕ್ಕೆ ಅಧಿಕಾರಿಗಳ ಸಭೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಶಾಂತಕುಮಾರ್, ಮಾಜಿ ಅಧ್ಯಕ್ಷ ಗಂಗಾಂಜಿನೇಯ, ಜಿಪಂ ಸದಸ್ಯ ವೈ,.ಎಚ್.ಹುಚ್ಚಯ್ಯ, ಮುಖಂಡರಾದ ರಮೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಶಂಕರ್, ಜಿಪಂ ಸದಸ್ಯ ಶಿವಕುಮಾರ್, ಸಿದ್ಧೇಗೌಡ, ತಾಪಂ ಇಒ ಜೈಪಾಲ್ ಸೇರಿದಂತೆ ತಾಲ್ಲೂಕು ಪಂಚಾಯಿತಿ ಸದಸ್ಯರು ನೂತನ ಅಧ್ಯಕ್ಷರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.