ತುಮಕೂರು:
ಜಿಲ್ಲೆಯಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತುಸಭೆ ನಡೆಸಿ ಮಾತನಾಡಿದ ಅವರು ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಮಳೆ ಆರಂಭವಾಗುತ್ತಿದ್ದು, ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕಿದೆ ಎಂದರು.
ಮಳೆಯಿಂದ ಉಂಟಾಗಬಹುದಾದ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ಲೋಕೋಪಯೋಗಿ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ದರಾಗಿರಬೇಕು. ಈಗಾಗಲೇ ಉತ್ತರಕರ್ನಾಟಕ ಹಾಗೂ ಪಶ್ಚಿಮಘಟ್ಟದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಮಳೆ ಆರಂಭವಾಗುತ್ತಿದ್ದು, ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಮಳೆಯಿಂದಾಗಿ ರಸ್ತೆಗಳು ಹದಗೆಟ್ಟರೆ ಪರ್ಯಾಯ ಮಾರ್ಗಗಳನ್ನು ಕೂಡ ಸಾರ್ವಜನಿಕರಿಗೆ ಕಲ್ಪಿಸಿಕೊಡಬೇಕಾಗುತ್ತದೆ. ಅಂತಹ ಪರ್ಯಾಯ ಮಾರ್ಗಗಳನ್ನು ಗುರುತಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆಯಲ್ಲಿರುವ ಪರಿಕರಗಳ ಬಗ್ಗೆಯೂ ಮಾಹಿತಿ ಪಡೆದರು.
ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವತ್ರಿಕ ರಜೆ ದಿನಗಳಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಹಾಗೂ ಮೊಬೈಲ್ ಸಂಪರ್ಕಕ್ಕೆ ಸಿಗುವಂತಿರಬೇಕು ಎಂದು ಅವರು ಸೂಚಿಸಿದರು. ತುರ್ತು ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಟಿ. ಭೂಬಾಲನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.